HomeBengaluru Newsಪ್ರಯಾಣಿಕರಿಗೆ ಮತ್ತೊಂದು ಶಾಕ್: ಬಸ್ ದರ ಹೆಚ್ಚಳಕ್ಕೆ ಸರ್ಕಾರದ ಮೊರೆ ಹೋದ ನಿಗಮಗಳು!

ಪ್ರಯಾಣಿಕರಿಗೆ ಮತ್ತೊಂದು ಶಾಕ್: ಬಸ್ ದರ ಹೆಚ್ಚಳಕ್ಕೆ ಸರ್ಕಾರದ ಮೊರೆ ಹೋದ ನಿಗಮಗಳು!

For Dai;y Updates Join Our whatsapp Group

Spread the love

ಬೆಂಗಳೂರು: ಕಳೆದ ಜನವರಿಯಲ್ಲಿ ಶೇ.15ರಷ್ಟು ಬಸ್ ಟಿಕೆಟ್ ದರವನ್ನು ಹೆಚ್ಚಿಸಿದ್ದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಇದೀಗ ಮತ್ತೊಮ್ಮೆ ದರ ಏರಿಕೆಗೆ ಮುಂದಾಗಿವೆ.

ಡೀಸೆಲ್ ದರ ಏರಿಕೆ, ನೌಕರರ ವೇತನ ಭಾರ ಹಾಗೂ ವಿವಿಧ ಆರ್ಥಿಕ ಹೊರೆಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಟಿಕೆಟ್ ದರವನ್ನು ಶೇ.25ರಷ್ಟು ಹೆಚ್ಚಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.

ಜಾಗತಿಕ ಬೆಳವಣಿಗೆಗಳ ಪರಿಣಾಮ ದೇಶದಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಯಷ್ಟು ಹೆಚ್ಚಳವಾಗಿದ್ದು, ಇದರಿಂದ ಸಾರಿಗೆ ನಿಗಮಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಇಂಧನ ದರ ಏರಿಕೆಯಿಂದ ಮಾತ್ರವೇ ಪ್ರತಿ ತಿಂಗಳು ಸುಮಾರು 40 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ಹೊರೆ ನಿಗಮಗಳ ಮೇಲೆ ಬೀಳುತ್ತಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ವಾರ್ಷಿಕ ನಷ್ಟ 480 ಕೋಟಿ ರೂಪಾಯಿ ದಾಟುವ ಸಾಧ್ಯತೆ ಇದೆ ಎಂದು ನಿಗಮಗಳು ಸರ್ಕಾರದ ಗಮನಕ್ಕೆ ತಂದಿವೆ.

ಜುಲೈ ತಿಂಗಳಿನಿಂದ ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಳ ಜಾರಿಗೆ ಬರಲಿದ್ದು, ಇದರಿಂದ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗಲಿದೆ. ನೌಕರರಿಗೆ ಪಾವತಿಸಬೇಕಿರುವ ಒಟ್ಟು 1,271 ಕೋಟಿ ರೂಪಾಯಿಗಳ ವೇತನ ಬಾಕಿಯಲ್ಲಿ ಇದುವರೆಗೆ 450 ಕೋಟಿ ರೂಪಾಯಿ ಮಾತ್ರ ಬಿಡುಗಡೆಯಾಗಿದ್ದು, ಇನ್ನೂ 821 ಕೋಟಿ ರೂಪಾಯಿ ಪಾವತಿಸಬೇಕಿದೆ.

ಅಲ್ಲದೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ನಿಗಮಗಳಿಗೆ ಬರಬೇಕಿರುವ ಸುಮಾರು 5,000 ಕೋಟಿ ರೂಪಾಯಿಗಳ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಈ ಎಲ್ಲ ಕಾರಣಗಳಿಂದಾಗಿ ನಿಗಮಗಳ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ದರ ಏರಿಕೆ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ದರ ಏರಿಕೆ ಪ್ರಸ್ತಾಪಕ್ಕೆ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಳೆದ ವರ್ಷವಷ್ಟೇ ಟಿಕೆಟ್ ದರ ಹೆಚ್ಚಿಸಲಾಗಿತ್ತು. ಈಗ ಮತ್ತೆ ದರ ಏರಿಕೆ ಮಾಡುವುದು ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಹೊರೆ ಬೀರುವಂತಾಗುತ್ತದೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೂ ಕೆಲ ಪ್ರಯಾಣಿಕರು, ಶಕ್ತಿ ಯೋಜನೆಯಡಿ ಸಂಪೂರ್ಣ ಉಚಿತ ಪ್ರಯಾಣ ನೀಡುವ ಬದಲು ಮಹಿಳಾ ಪ್ರಯಾಣಿಕರಿಂದ ಕನಿಷ್ಠ ಅರ್ಧದಷ್ಟು ದರ ವಸೂಲಿ ಮಾಡುವ ಮೂಲಕ ನಿಗಮಗಳ ಆರ್ಥಿಕ ಸಂಕಷ್ಟವನ್ನು ಕಡಿಮೆ ಮಾಡಬಹುದು ಎಂಬ ಸಲಹೆಯನ್ನೂ ನೀಡಿದ್ದಾರೆ.

ಸಾರಿಗೆ ನಿಗಮಗಳ ಮನವಿಗೆ ರಾಜ್ಯ ಸರ್ಕಾರ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಕುತೂಹಲ ಮೂಡಿಸಿದ್ದು, ಬಸ್ ಟಿಕೆಟ್ ದರ ಏರಿಕೆ ಕುರಿತು ಅಂತಿಮ ನಿರ್ಧಾರ ಮುಖ್ಯಮಂತ್ರಿಗಳ ಮಟ್ಟದಲ್ಲಿ ಕೈಗೊಳ್ಳಲಾಗುವ ಸಾಧ್ಯತೆ ಇದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!