ಚಾಮರಾಜನಗರ: ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಘಟನೆ ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ಹತ್ತಿರ ಭೂಮಿಯಲ್ಲಿ ಮಣ್ಣಿನಲ್ಲಿ ಮರೆಮಾಡಿ ಇಡಲಾಗಿದ್ದ ಹುಲಿಯ ಅರ್ಧ ಕಳೇಬರ ಪತ್ತೆಯಾಗಿದ್ದು, ಹುಲಿಯ ತಲೆ, ಭುಜ, ಮುಂಗಾಲುಗಳು ಮಾತ್ರ ಲಭ್ಯವಾಗಿದೆ. ಉಳಿದ ಭಾಗಗಳು ನಾಪತ್ತೆಯಾಗಿದೆ. ಈ ಘಟನೆ ಮಲೆಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ನಡೆದಿದೆ.
ಈ ಸಂಬಂಧ ಶೋಕ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.