ಬೀದರ್: ಸರ್ಕಾರಿ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
2027ರ ಜನವರಿ 19ರೊಳಗೆ ನೋಟಿಸ್ಗೆ ಉತ್ತರ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.
ಕಮಲನಗರ ತಾಲೂಕಿನ ಚಂದೋರಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ದೀಪಕ್ ಪಾಟೀಲ್ ಅವರು 2024ರಲ್ಲಿ ಶಾಸಕ ಪ್ರಭು ಚವ್ಹಾಣ್ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಕೋಳಾರ (ಬಿ) ಗ್ರಾಮದ ಸರ್ವೆ ನಂಬರ್ 102ರಲ್ಲಿರುವ 3 ಎಕರೆ 19 ಗುಂಟೆ ಸರ್ಕಾರಿ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬುದು ಅವರ ಆರೋಪವಾಗಿದೆ.
ಗೋಮಾಳ ಜಮೀನು ಒತ್ತುವರಿ ಆರೋಪವೇನು?
ಗ್ರಾಮ ನಕ್ಷೆ ಹಾಗೂ ಕಂದಾಯ ದಾಖಲೆಗಳ ಪ್ರಕಾರ ವಿವಾದಿತ ಜಮೀನು ಸರ್ಕಾರಿ ಗೋಮಾಳಕ್ಕೆ ಸೇರಿದೆ. 2020ರಲ್ಲಿ ಅಂದಿನ ಜಿಲ್ಲಾಧಿಕಾರಿಗಳು ಗೋಮಾಳದ ಮಾಲೀಕತ್ವ ಬದಲಾವಣೆಯಾಗಿರುವ ಕುರಿತು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಜಮೀನನ್ನು ಮರಳಿ ವಶಕ್ಕೆ ಪಡೆಯಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ದೂರುದಾರ ದೀಪಕ್ ಪಾಟೀಲ್ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸದ ಹಿನ್ನೆಲೆಯಲ್ಲಿ 2025ರ ಮಾರ್ಚ್ನಲ್ಲಿ ವಿಶೇಷ ನ್ಯಾಯಾಲಯ ಜಿಲ್ಲಾಧಿಕಾರಿಗಳ ವಿರುದ್ಧ ಜಾಮೀನು ಸಹಿತ ವಾರಂಟ್ ಜಾರಿ ಮಾಡಿತ್ತು.
ವಿವಾದಿತ ಜಮೀನು ಸರ್ಕಾರಿ ಆಸ್ತಿ ಎಂದು ವರದಿ:
ಇತ್ತೀಚೆಗೆ ನವೆಂಬರ್ 19ರಂದು ಜಿಲ್ಲಾಡಳಿತ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ವಿವಾದಿತ ಜಮೀನು ಸರ್ಕಾರಿ ಭೂಮಿ ಎಂದು ತಿಳಿಸಿದೆ ಎನ್ನಲಾಗಿದೆ. ಆದರೆ, ಇದೇ ಜಮೀನಿಗೆ ಸಂಬಂಧಿಸಿದಂತೆ ಶಾಸಕ ಪ್ರಭು ಚವ್ಹಾಣ್ ಅವರ ಹೆಸರಿನಲ್ಲಿ ಕ್ರಯಪತ್ರ (Sale Deed) ಮಾಡಲಾಗಿದೆ ಎಂಬ ವಿಚಾರವೂ ಬೆಳಕಿಗೆ ಬಂದಿದೆ.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಇದೀಗ ಶಾಸಕ ಪ್ರಭು ಚವ್ಹಾಣ್ ಅವರಿಗೆ ನೋಟಿಸ್ ಜಾರಿ ಮಾಡಿದೆ. 2027ರ ಜನವರಿ 19ರೊಳಗೆ ಉತ್ತರ ಸಲ್ಲಿಸುವಂತೆ ಸೂಚಿಸಿದೆ ಎಂದು ದೂರುದಾರ ದೀಪಕ್ ಪಾಟೀಲ್ ತಿಳಿಸಿದ್ದಾರೆ.









