ಕೊಡಗು: ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕೊಡಗಿನಲ್ಲಿ ಮತ್ತೊಂದು ಜೀವ ಬಲಿಯಾಗಿದೆ.
ತೋಟಕ್ಕೆ ತೆರಳಿದ್ದ ಮಾಲೀಕರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ತಾರೀಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೇಶವಯ್ಯ (50) ಮೃತಪಟ್ಟವರು.
ಕೇಶವಯ್ಯ ಅವರು ಎಂದಿನಂತೆ ಬೆಳ್ಳಂಬೆಳಗ್ಗೆ ತಮ್ಮ ತೋಟಕ್ಕೆ ತೆರಳಿದ್ದರು. ಈ ವೇಳೆ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಕೇಶವಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದ್ದು, ದುಃಖ ಮಡುಗಟ್ಟಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ:
ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ನಿರಂತರವಾಗಿ ಹೆಚ್ಚುತ್ತಿದೆ ಎಂಬ ಆತಂಕ ಗ್ರಾಮಸ್ಥರಲ್ಲಿ ಮನೆಮಾಡಿದೆ. ತೋಟಗಳಿಗೆ ತೆರಳಲು ಕಾರ್ಮಿಕರು ಹಾಗೂ ತೋಟದ ಮಾಲೀಕರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇತ್ತೀಚೆಗಷ್ಟೇ ಹಾಸನದಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಕೊಡಗಿನಲ್ಲಿ ಮತ್ತೊಂದು ಸಾವು ಸಂಭವಿಸಿರುವುದು ಆತಂಕ ಹೆಚ್ಚಿಸಿದೆ. ಅರಣ್ಯ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಹಾಗೂ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.









