ಚಿಕ್ಕಮಗಳೂರು: ಬಿ.ಇ.ಓ. (ಕ್ಷೇತ್ರ ಶಿಕ್ಷಣಾಧಿಕಾರಿ) ಅವರು ಮನೆಗೆ ತೆರಳಿ ತರಾಟೆಗೆ ತೆಗೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಳ್ಳಂಬಳಸೆ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಇತ್ತೀಚೆಗೆ ನಡೆದ 2ನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ವಿಫಲವಾಗಿದ್ದು, 500ಕ್ಕೆ 93 ಅಂಕ ಗಳಿಸಿದ್ದಳು. ಈ ಹಿನ್ನೆಲೆ ಬಿ.ಇ.ಓ. ಅವರು ವಿದ್ಯಾರ್ಥಿನಿಯ ಮನೆಗೆ ತೆರಳಿ, “ಇಷ್ಟೊಂದು ಕಡಿಮೆ ಅಂಕ ತೆಗೆದುಕೊಂಡು ನೀನು ಪಾಸ್ ಆಗ್ತೀಯಾ?” ಎಂದು ಬುದ್ಧಿ ಹೇಳಿ ಬಂದಿದ್ದಾರೆ ಎನ್ನಲಾಗಿದೆ. ಈ ಘಟನೆಯ ನಂತರ ವಿದ್ಯಾರ್ಥಿನಿ ಮಂಕಾಗಿ, ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮತ್ತೊಮ್ಮೆ ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂಬ ಭಯದಲ್ಲಿ ವಿದ್ಯಾರ್ಥಿನಿ ಜನವರಿ 28ರ ರಾತ್ರಿ ಮನೆಯಲ್ಲಿದ್ದ ಕೀಲು ನೋವು ಹಾಗೂ ಉಳುಕಿನ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ಪೋಷಕರು ಆಕೆಯನ್ನು ಕಡೂರು ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಈ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗಳ ಸಾವಿನ ಬಗ್ಗೆ ಪೋಷಕರು ಇದುವರೆಗೆ ಯಾವುದೇ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ.



