ವಿಜಯಸಾಕ್ಷಿ ಸುದ್ದಿ, ಗದಗ: ನೀಟ್ ಪರೀಕ್ಷೆ ವಿಚಾರವಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಜನಪ್ರಿಯತೆಗೆ ಧಕ್ಕೆ ತರಲು ನಡೆಸಿದ ರಾಜಕೀಯ ಷಡ್ಯಂತ್ರವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಉದ್ಯಮಿ ವಿಜಯಕುಮಾರ ಗಡ್ಡಿ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನೀಟ್ ಪರೀಕ್ಷೆಯಲ್ಲಿ ಅಕ್ರಮ ಬೆಳಕಿಗೆ ಬಂದ ತಕ್ಷಣ ಕೇಂದ್ರ ಸರ್ಕಾರ ಮರು ಪರೀಕ್ಷೆ ನಡೆಸಿ, ಶೀಘ್ರ ಫಲಿತಾಂಶ ಪ್ರಕಟಿಸಿದ್ದಲ್ಲದೆ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ಇಂತಹ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವುದು ರಾಜಕೀಯ ಪ್ರೇರಿತ ನಡೆ ಎಂದು ಆರೋಪಿಸಿದ ಅವರು, ಪ್ರತಿಭಟನೆಯ ಹೆಸರಿನಲ್ಲಿ ಪ್ರಧಾನಿ ನಿವಾಸದ ಮುಂದೆ ನಡೆಯುತ್ತಿರುವ ಪ್ರತಿಭಟನೆಗಳನ್ನು ಕೆಲವರು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.
ನೀಟ್ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಹುತೇಕರಿಗೆ ಪರೀಕ್ಷೆಯೊಂದಿಗೆ ನೇರ ಸಂಬಂಧವೇ ಇಲ್ಲ. ಕೇಂದ್ರ ಸರ್ಕಾರವನ್ನು ವಿರೋಧಿಸುವ ಉದ್ದೇಶದಿಂದ ನೀಟ್ ವಿಷಯವನ್ನು ಬಳಸಿಕೊಂಡು ಹಿಂಸಾತ್ಮಕ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ವಿಜಯಕುಮಾರ ಗಡ್ಡಿ ಆರೋಪಿಸಿದ್ದಾರೆ.
ದೇಶವನ್ನು ಪ್ರಾದೇಶಿಕತೆ ಮತ್ತು ರಾಜಕೀಯ ಉದ್ದೇಶಗಳ ಹೆಸರಿನಲ್ಲಿ ವಿಭಜಿಸಲು ಕೆಲ ಶಕ್ತಿಗಳು ಯತ್ನಿಸುತ್ತಿದ್ದು, ಇಂತಹ ದುರುದ್ದೇಶದ ಪ್ರತಿಭಟನೆಗಳಿಗೆ ಜನ ಬೆಂಬಲ ನೀಡುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



