ಮೈಸೂರು: ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯವನ್ನು ಬೆಂಗಳೂರಿನಲ್ಲೇ ನಡೆಸುವಂತೆ ಬಿಸಿಸಿಐಗೆ ಮನವಿ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ಆಯೋಜಿಸುವಂತೆ ಈಗಾಗಲೇ ಬಿಸಿಸಿಐ ಜೊತೆ ಮಾತುಕತೆ ನಡೆಸಿದ್ದೇನೆ. ಬಿಸಿಸಿಐ ಕೂಡ ಈ ಬಾರಿ ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಸುವ ಕುರಿತು ಚರ್ಚೆ ನಡೆಸುತ್ತಿದೆ ಎಂದು ಹೇಳಿದರು.
ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ತಂಡದ ಹೋಂ ಗ್ರೌಂಡ್‌ನಲ್ಲಿ ಉದ್ಘಾಟನಾ ಪಂದ್ಯ ನಡೆಯುವ ಸಂಪ್ರದಾಯವಿದೆ. ಆದರೆ ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ನಡೆದ ಘಟನೆಯಿಂದ ಕೆಲ ಗೊಂದಲಗಳು ಉಂಟಾಗಿದ್ದವು. ಈ ಹಿನ್ನೆಲೆ ನಮ್ಮ ತಂಡ ಚುನಾವಣೆಯಲ್ಲಿ ಗೆದ್ದ ಬಳಿಕ ಈಗಾಗಲೇ ರಾಜ್ಯ ಸರ್ಕಾರದೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ವೆಂಕಟೇಶ್ ಪ್ರಸಾದ್ ತಿಳಿಸಿದರು.
ಮುಖ್ಯಮಂತ್ರಿ ಹಾಗೂ ಡಿಸಿಎ (ಡಿಸಿಎ/ಸರ್ಕಾರದ ಸಂಬಂಧಿತ ಇಲಾಖೆ) ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಗೃಹ ಸಚಿವರೊಂದಿಗೆ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯದ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು. ಬೆಂಗಳೂರಿನಲ್ಲಿ ಐಪಿಎಲ್ ಸೇರಿದಂತೆ ಅಂತಾರಾಷ್ಟ್ರೀಯ ಹಾಗೂ ಇತರೆ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.



