ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಕಾಮಗಾರಿಗಳನ್ನು ಕೈಗೊಳ್ಳಲು ವಿಶೇಷ ಅನುದಾನವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ದಿಶಾ ಸಮಿತಿ ಸದಸ್ಯರಾಗಿರುವ ಶಾಸಕ ಡಾ. ಚಂದ್ರು ಲಮಾಣಿ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ನಂತರ ಶಾಸಕರು ಮುಖ್ಯಮಂತ್ರಿಗಳ ಬಳಿ ತೆರಳಿ ಕ್ಷೇತ್ರದ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ, ಕ್ಷೇತ್ರದ ಜನರ ಹಿತದೃಷ್ಟಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ವಿನಂತಿಸಿಕೊಂಡರು.
ಶಾಸಕರ ಅಹವಾಲನ್ನು ಆಲಿಸಿದ ಸಿದ್ದರಾಮಯ್ಯನವರು, ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.