ವಿಜಯಸಾಕ್ಷಿ ಸುದ್ದಿ, ಧಾರವಾಡ: ಸರಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2025-26ನೇ ಸಾಲಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶಿಸಿದ್ದು, ಜೂ.21ರ ಸರಕಾರಿ ಆದೇಶದಲ್ಲಿ ತಿಳಿಸಿರುವ ಷರತ್ತು ಮತ್ತು ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಿ, ಪಾರದರ್ಶಕವಾಗಿ ಖರೀದಿಸಬೇಕು, ಸರಕಾರಿ ನಿಯಮ ಪಾಲನೆಯಲ್ಲಿ ಲೋಪವಾಗದಂತೆ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದರು.
ಅವರು ಮಂಗಳವಾರ ಸಂಜೆ ಜಿ.ಪಂ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ಹಂತದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದರು.
ಸರಕಾರದ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಸರಿಯಾಗಿ ತಲುಪಬೇಕು. ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ನೀಡುವ ಸಮವಸ್ತç, ಪಠ್ಯಪುಸ್ತಕ ಮತ್ತು ಶೂ-ಸಾಕ್ಸ್ ಗುಣಮಟ್ಟದ್ದಾಗಿರಬೇಕು. ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಖರೀದಿಗೆ ಅನುದಾನ ಎಸ್.ಡಿ.ಎಂ.ಸಿ ಖಾತೆಗೆ ನೇರವಾಗಿ ಜಮೆ ಆಗುತ್ತದೆ. ಇವುಗಳ ಖರೀದಿಗೆ ಅನುಸರಿಸುವ ಮಾರ್ಗಸೂಚಿ ಹಾಗೂ ಷರತ್ತು, ನಿಬಂಧನೆಗಳನ್ನು ಈಗಾಗಲೇ ಎಲ್ಲ ಶಾಲೆಗಳ ಮುಖ್ಯಸ್ಥರಿಗೆ ಕಳುಹಿಸಲಾಗಿದೆ. ಸಮಿತಿ ಸದಸ್ಯರಿಗೆ ಸುತ್ತೋಲೆ ಮಾಹಿತಿ, ಸೂಕ್ತ ತಿಳುವಳಿಕೆ ನೀಡಿ, ಪಾರದರ್ಶಕತೆ ಅನುಸರಿಸಬೇಕು ಎಂದು ಹೇಳಿದರು.
ಮಿಷನ್ ವಿದ್ಯಾಕಾಶಿ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಮತ್ತು ಜಿಲ್ಲೆಯ ಶೈಕ್ಷಣಿಕ ಸುಧಾರಣೆಗಾಗಿ ಜಿಲ್ಲಾಡಳಿತ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಶಾಲಾ ಅವಧಿಯಲ್ಲಿಯೇ ಶಾಲೆಯಲ್ಲಿ ಇದ್ದು, ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಆಸಕ್ತಿ, ಕಾಳಜಿವಹಿಸುವುದು ಅತೀ ಜರೂರಿದೆ. ಆದ್ದರಿಂದ ಜಿಲ್ಲೆಯ ವಿವಿಧ ಕ್ಷೇತ್ರಶಿಕ್ಷಣಾಧಿಕಾರಿಗಳ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರೌಢಾಲಾ ಶಿಕ್ಷಕರನ್ನು ಬಿಎಲ್‌ಓ ಆಗಿ ನಿಯೋಜಿಸಲಾಗುತ್ತಿದ್ದನ್ನು ನಿಲ್ಲಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಮಾತನಾಡಿ, ಶೈಕ್ಷಣಿಕ ಸುಧಾರಣೆಗೆ ಸಮುದಾಯದ ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ತಾಲೂಕಿನಲ್ಲಿ ಎಲ್ಲ ಶಾಲೆಗಳ ಎಸ್.ಡಿ.ಎಂ.ಸಿ ಅಧ್ಯಕ್ಷರ, ಸದಸ್ಯರ, ಪಾಲಕರ ಸಮಿತಿ ಅಧ್ಯಕ್ಷರ ಹಾಗೂ ಇಲಾಖೆ ಅಧಿಕಾರಿಗಳ ಸಭೆ ಆಯೋಜಿಸಲಾಗುವುದು. ಬಿಇಓ, ಡಿಡಿಪಿಐ ಅವರು ಕಚೇರಿಯಲ್ಲಿ ಕಾಲ ಕಳೆಯದೆ ಶಾಲಾಗಳಿಗೆ ನಿರಂತರವಾಗಿ ಭೇಟಿ ನೀಡಿ, ಪರಿಶೀಲಿಸಬೇಕು. ಶಿಕ್ಷಕರ, ವಿದ್ಯಾರ್ಥಿಗಳ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಸೇರಿದಂತೆ ಡಿಡಿಪಿಐ ಕಚೇರಿಯ ವಿವಿಧ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್.ಪಿಗಳು, ಸಿಆರ್.ಪಿಗಳು, ಶಿಕ್ಷಣ ನಿರೀಕ್ಷಕರು ಮುಂತಾದವರಿದ್ದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಅಲ್ಪಸಂಖ್ಯಾತ ಸಮುದಾಯಗಳೊಂದಿಗೆ ಸಂಬAಧಿಸಿದ ಇಲಾಖೆಗಳ ಸಹಯೋಗದಲ್ಲಿ ಸಭೆ ಜರುಗಿಸಿ, ಮಕ್ಕಳ ಶಾಲಾ ಹಾಜರಾತಿ ಹೆಚ್ಚಳಕ್ಕೆ ಮತ್ತು ಪರಿಣಾಮಕಾರಿಯಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಮುದಾಯಗಳ ಸಹಕಾರ ಕೋರುತ್ತೇವೆ. ಈ ಕುರಿತು ಚರ್ಚಿಸಲು ವಿವಿಧ ಸಮುದಾಯಗಳೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಪ್ರತ್ಯೇಕ ಸಭೆ ಅಯೋಜಿಸಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.