ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಬಿಲ್ ಬಾಕಿದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ.
ನೀರಿನ ಬಾಕಿ ಮೊತ್ತವನ್ನು ಒಂದೇ ಬಾರಿಗೆ ಪಾವತಿಸಿದರೆ ದಂಡ , ಬಡ್ಡಿ ಮತ್ತು ಇತರ ಶುಲ್ಕಗಳಲ್ಲಿ ಶೇ.100ರಷ್ಟು ರಿಯಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ. ಗೃಹ ಬಳಕೆಯ ಗ್ರಾಹಕರು, ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರು, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಇಲಾಖೆಗಳು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ಇತರ ಶಾಸನಬದ್ಧ ಸಂಸ್ಥೆಗಳು ಬಾಕಿ ಮೊತ್ತವನ್ನು ಕಟ್ಟಿ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕ ಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇಕಡಾ 100%ರಷ್ಟು ಮನ್ನಾ ಮಾಡುವ “ಏಕಕಾಲಿಕ ತೀರುವಳಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.


