ಬೆಂಗಳೂರು: ಹಸುಗೂಸು ಮಾರಾಟದ ಪ್ರಕರಣ ಸಂಬಂಧ ಆರೋಪಿಗಳು ಇದುವರೆಗೆ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವ ವಿಚಾರ ಸಿಸಿಬಿ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಮಾರಾಟ ಮಾಡಿದ ಮಕ್ಕಳ ಪೈಕಿ 50-60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿಗೆ ಮಾರಾಟ ಮಾಡಿರುವುದು ತಿಳಿದುಬಂದಿದೆ.
ಹಸುಗೂಸು ಮಾರಾಟ ಪ್ರಕರಣ ಸಂಬಂಧ ಬಂಧಿತ ಎಂಟು ಆರೋಪಿಗಳನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅದರಂತೆ, ಆರೋಪಿಗಳು ಕಳೆದ 6 ವರ್ಷಗಳಲ್ಲಿ 250 ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ ವಿಚಾರವನ್ನು ಬಾಯಿಬಿಟ್ಟಿದ್ದಾರೆ. ಈ ಪೈಕಿ ಕೇವಲ 50-60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿದ್ದಾರೆ.
ಆರೋಪಿಗಳು ಈ ವಿಚಾರವನ್ನು ಬಾಯಿಬಿಡುತ್ತಿದ್ದಂತೆ ಮತ್ತಷ್ಟು ಕಾರ್ಯಪ್ರವೃತ್ತರಾದ ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಮಾರಾಟ ಆಗಿರುವ ಮಕ್ಕಳ ಬಗ್ಗೆ ಆರೋಪಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಸದ್ಯ 10 ಮಕ್ಕಳ ಸುಳಿವು ಸಿಕ್ಕಿದ್ದು, ಉಳಿದ ಮಕ್ಕಳನ್ನು ಎಲ್ಲಿ, ಯಾರಿಗೆ ಮಾರಾಟ ಮಾಡಲಾಗಿದೆ ಎಂದು ವಿಚಾರಣೆ ನಡೆಸುತ್ತಿದ್ದಾರೆ.