ಬೆಂಗಳೂರು: ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಗದ್ದಲಕ್ಕೆ ಕಾರಣವಾಗಿದೆ. ಕಾರ್ಯಕರ್ತರ ವಿರುದ್ಧ ಪೊಲೀಸ್ ಕ್ರಮವನ್ನು ಖಂಡಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಬಳಿ ಧರಣಿ ನಡೆಸಿ ಪ್ರತಿಭಟಿಸಿದ್ದಾರೆ. ಈ ವೇಳೆ ‘ನಮ್ಮ ಕಾರ್ಯಕರ್ತರಿಗೆ ತೊಂದರೆ ನೀಡುವ ಬದಲು ನನ್ನನ್ನೇ ಬಂಧಿಸಿ’ ಎಂದು ಸವಾಲು ಹಾಕಿದ್ದಾರೆ.
ಸ್ಟಿಂಗ್ ಆಪರೇಷನ್ ವಿವಾದದ ಕುರಿತು ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಬಳಿಕ ನೇರವಾಗಿ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿದರು. ಜೆಡಿಎಸ್ ಕಾರ್ಯಕರ್ತರನ್ನು ಅನಗತ್ಯವಾಗಿ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಪೊಲೀಸರ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದರ್ಪ ತೋರಿಸಬಾರದು. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ನಿಜವಾದ ತಪ್ಪಿತಸ್ಥರನ್ನು ಪತ್ತೆಹಚ್ಚಬೇಕು ಎಂದು ಆಗ್ರಹಿಸಿದರು.
‘ನಾನು ಹೆದರುವ ಮನುಷ್ಯನಲ್ಲ. ನಮ್ಮ ಕಾರ್ಯಕರ್ತರಿಗೆ ಸುಮ್ಮನೆ ತೊಂದರೆ ಕೊಡಬೇಡಿ. ಬಂಧಿಸುವುದಾದರೆ ನನ್ನನ್ನೇ ಬಂಧಿಸಿ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಅಥವಾ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ತನಿಖೆ ನಡೆಸಿ’ ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಪ್ರಕರಣದ ಕುರಿತು ಒತ್ತಡಕ್ಕೆ ಮಣಿಯದೆ ಪ್ರಾಮಾಣಿಕ ತನಿಖೆ ನಡೆಸುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಪೊಲೀಸ್ ಆಯುಕ್ತರು ನೀಡಿರುವ ಭರವಸೆಯನ್ನು ಗೌರವಿಸಿ ಧರಣಿಯನ್ನು ಕೈಬಿಡುತ್ತಿರುವುದಾಗಿ ತಿಳಿಸಿದ ಅವರು, ಸರ್ಕಾರದ ಕಡೆಯಿಂದ ಯಾವುದೇ ಭರವಸೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಪೊಲೀಸರಿಗೆ ಎರಡು ದಿನಗಳ ಗಡುವು ನೀಡಿದ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಕುಮಾರಸ್ವಾಮಿ ಅವರ ಧರಣಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಪೊಲೀಸ್ ಆಯುಕ್ತರ ಕಚೇರಿ ಬಳಿ ಆಗಮಿಸಿದ ಯತ್ನಾಳ್, ಕುಮಾರಸ್ವಾಮಿ ಅವರ ಹೋರಾಟಕ್ಕೆ ಬೆಂಬಲ ನೀಡಲು ಬಂದಿರುವುದಾಗಿ ಹೇಳಿದರು.
‘ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಬಂದಿದ್ದೇನೆ. ಅವರ ಹೋರಾಟಕ್ಕೆ ನೈತಿಕ ಬೆಂಬಲ ನೀಡುವುದು ನನ್ನ ಉದ್ದೇಶ. ಪೊಲೀಸ್ ಆಯುಕ್ತರನ್ನು ಭೇಟಿಯಾಗುವುದಿಲ್ಲ’ ಎಂದು ಯತ್ನಾಳ್ ತಿಳಿಸಿದರು.



