ಗದಗ: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಗದಗದಲ್ಲಿ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ವಿಚಾರ ಕೇವಲ ಮಾಧ್ಯಮಗಳಲ್ಲಿ ಓಡಾಡುತ್ತಿದೆ. ಆದರೆ ನಿಜವಾದ ಸ್ಟಿಂಗ್ ಎಲ್ಲಿ ನಡೆದಿದೆ? ಯಾರು ಮಾಡಿದ್ದಾರೆ? ಯಾರ ಮೇಲೆ ಮಾಡಿದ್ದಾರೆ? ಎಂಬುದೇ ಬಹಿರಂಗವಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.
ಯಾರೋ ಯೂಟ್ಯೂಬರ್ಗಳು ವಿಡಿಯೋಗಳನ್ನು ಫಾರ್ವರ್ಡ್ ಮಾಡುತ್ತಿದ್ದಾರೆ. ಆದರೆ ಆ ವಿಡಿಯೋಗಳನ್ನು ಸೃಷ್ಟಿಸಿದವರು ಯಾರು ಎಂಬುದರ ಬಗ್ಗೆ ಗಂಭೀರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಈ ಪ್ರಕರಣ ಪ್ರತಿಯೊಬ್ಬರ ನೈತಿಕತೆಯನ್ನೂ ಪ್ರಶ್ನಿಸುವ ಹಂತಕ್ಕೆ ತಲುಪಿದೆ. ಇದಕ್ಕೆ ಅಂತ್ಯ ಹಾಡಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿಗಳೇ ಪ್ರಸ್ತಾಪಿಸಿರುವುದರಿಂದ ಅವರೇ ಗಂಭೀರವಾಗಿ ಪರಿಗಣಿಸಬೇಕು. ಕೇವಲ ಹೇಳಿಕೆ ನೀಡಿ ಸುಮ್ಮನಾಗುವುದಲ್ಲ. ಸಚಿವ ಸಂಪುಟದಲ್ಲೂ ಚರ್ಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ಪ್ರಕರಣವನ್ನು ಅರ್ಧಕ್ಕೆ ಕೈಬಿಟ್ಟರೆ ಮುಖ್ಯಮಂತ್ರಿಗಳ ಮೇಲೆಯೇ ಅನುಮಾನದ ಪ್ರಶ್ನೆಗಳು ಮೂಡಬಹುದು. ಅದಕ್ಕೆ ಅವಕಾಶ ನೀಡಬಾರದು ಎಂದು ಬೊಮ್ಮಾಯಿ ಹೇಳಿದ್ದಾರೆ. ಇದೇ ವೇಳೆ ಎಸ್ಐಆರ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳನ್ನೂ ಟೀಕಿಸಿದ್ದಾರೆ.
ಕಾಂಗ್ರೆಸ್ ಜನರ ದಾರಿ ತಪ್ಪಿಸುವ ಹೋರಾಟ ನಡೆಸುತ್ತಿದೆ. ಚುನಾವಣೆಯಲ್ಲಿನ ಸೋಲಿನ ಹೊಣೆಯನ್ನು ಚುನಾವಣಾ ಆಯೋಗ ಹಾಗೂ ಇವಿಎಂ ಯಂತ್ರಗಳ ಮೇಲೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಸಂವಿಧಾನಾತ್ಮಕ ಸಂಸ್ಥೆಗಳಿಗೆ ಗೌರವ ನೀಡಬೇಕು. ಸುಪ್ರೀಂ ಕೋರ್ಟ್ ಆದೇಶಗಳನ್ನು ಪಾಲಿಸಬೇಕು ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.



