ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ `ಆಶಾಕಿರಣ’ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 52.85 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಗುರುವಾರ ನಡೆದ ಸಭೆಯಲ್ಲಿ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ 107 ಕೆರೆಗಳಿಗೆ ಬೇಡ್ತಿ ನದಿಯಿಂದ ನೀರನ್ನು ಎತ್ತಿ ತುಂಬಿಸುವ ಯೋಜನೆಯನ್ನು 179.50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ರಾಜ್ಯದ ವಿವಿಧ 22 ವಿಧಾನಸಭಾ ಕ್ಷೇತ್ರಗಳಲ್ಲಿ (40 ಕಾಮಗಾರಿಗಳು) ಅಲ್ಪಸಂಖ್ಯಾತರು ವಾಸಿಸುತ್ತಿರುವ ನಗರ ಪ್ರದೇಶಗಳಲ್ಲಿನ ಅತೀ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳನ್ನಾಗಿ ಅಭಿವೃದ್ಧಿಪಡಿಸಲು 2024-25ರಲ್ಲಿ ಬಿಡುಗಡೆ ಮಾಡಲಾದ ರೂ. 160 ಕೋಟಿಗಳನ್ನು ಒಳಗೊಂಡಂತೆ ಒಟ್ಟು ರೂ. 398 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಅಡಿಯಲ್ಲಿರುವ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನುಸರಣೀಯ ಆಸ್ಪತ್ರೆ ನಿರ್ವಹಣಾ ವ್ಯವಸ್ಥೆ ತಂತ್ರಾಂಶದ ಹಂತವಾರು ಅನುಷ್ಠಾನಕ್ಕಾಗಿ ತಾತ್ವಿಕ ಅನುಮೋದನೆ ಸಿಕ್ಕಿದೆ.
ಭಾರತ ಸರ್ಕಾರದ ಅಖಿಖಂಗಿ ಯೋಜನೆ, 2025 ಅಡಿಯಲ್ಲಿ (ಪ್ರತಿ ಫಲಾನುಭವಿಗೆ ರೂ.1.5 ಲಕ್ಷ ಸಹಾಯ), ರಾಜ್ಯ ಸರ್ಕಾರದಿಂದ ಹೆಚ್ಚುವರಿ (ಟಾಪ್-ಅಪ್) ರೂಪದಲ್ಲಿ ಪ್ರತಿ ಫಲಾನುಭವಿಗೆ ರೂ.1 ಲಕ್ಷ ನೆರವು ಒದಗಿಸುವ ಪ್ರಸ್ತಾವನೆಯಿದ್ದು, ಇದಕ್ಕಾಗಿ ಈಗಿರುವ ರಾಜ್ಯ ಅಪಘಾತ ಪೀಡಿತರ ಯೋಜನೆಗೆ ತಿದ್ದುಪಡಿ ಮಾಡುವುದನ್ನು ಹಾಗೂ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಿಲ್ಲದ ಪ್ರಸ್ತಾವನೆಗೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ 20 ವಿದ್ಯಾರ್ಥಿ ನಿಲಯಗಳನ್ನು ರಾಜ್ಯದ 14 ಜಿಲ್ಲೆಗಳಲ್ಲಿ ರೂ.15.45 ಕೋಟಿಗಳ ಮೊತ್ತದಲ್ಲಿ ಹೊಸದಾಗಿ ಪ್ರಾರಂಭಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
60 ಪ್ರಕರಣಗಳು ವಾಪಸ್
ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ಅವರು ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 2019ರಿಂದ 2023ರವರೆಗೆ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾಗಿ ತನಿಖೆ ಮಾಡಿ ವರದಿಯನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚಿಸಲಾಗುವುದು. ರೈತರು, ವಿದ್ಯಾರ್ಥಿಗಳು, ಕನ್ನಡ ಹೋರಾಟಗಾರರ ಮೇಲಿದ್ದ 60 ಪ್ರಕರಣಗಳನ್ನು ಸರ್ಕಾರ ಹಿಂಪಡೆದಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಸಭೆಯಲ್ಲಿ ತಿಳಿಸಿದರು.