HomeGadag Newsಗದಗ ಕ್ರೀಡಾಪಟುಗಳಿಗೆ ಸಿಕ್ಕಿದೆ ಬಲಿಷ್ಠ ವೇದಿಕೆ: ಬಿ.ಬಿ. ಆಸೂಟಿ

ಗದಗ ಕ್ರೀಡಾಪಟುಗಳಿಗೆ ಸಿಕ್ಕಿದೆ ಬಲಿಷ್ಠ ವೇದಿಕೆ: ಬಿ.ಬಿ. ಆಸೂಟಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡಾ ಕ್ಷೇತ್ರದಲ್ಲಿ ಗದಗ ಜಿಲ್ಲೆ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ್ದು, ಹಲವು ಪ್ರತಿಭಾವಂತ ಕ್ರೀಡಾಪಟುಗಳನ್ನು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ನೀಡಿದೆ. ಜಿಲ್ಲೆಯ ಯುವ ಕ್ರೀಡಾ ಪ್ರತಿಭೆಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಅಗತ್ಯವಾದ ಉತ್ತಮ ಮೂಲಸೌಕರ್ಯಗಳು ನಿರ್ಮಾಣಗೊಂಡಿವೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಆಸೂಟಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನಗರದ ಮಹಾತ್ಮ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮೇಜರ್ ಧ್ಯಾನಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾಕಿ ದಿಗ್ಗಜ ಮೇಜರ್ ಧ್ಯಾನಚಂದ್ ಅವರ ಸಾಧನೆಯನ್ನು ಸ್ಮರಿಸಿದ ಅವರು, ಗದಗ–ಬೆಟಗೇರಿ ಅವಳಿ ನಗರಕ್ಕೂ ಹಾಕಿ ಕ್ರೀಡೆಗೂ ಐತಿಹಾಸಿಕ ನಂಟಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಬೇಣು ಭಟ್, ರಾಜೀವ್ ಬಾಂಗ್ಲೆ ಹಾಗೂ ಸುನಿಲ್ ಜೋಶಿ ಅವರಂತಹ ಅಪ್ರತಿಮ ಕ್ರೀಡಾಪಟುಗಳನ್ನು ನೀಡಿದ ಹೆಮ್ಮೆ ಗದಗ ಜಿಲ್ಲೆಗಿದೆ ಎಂದರು.

ಗದಗದಲ್ಲಿ ಅತ್ಯಾಧುನಿಕ ಒಳಾಂಗಣ ಕ್ರೀಡಾಂಗಣ ನಿರ್ಮಾಣಗೊಂಡಿದ್ದು, ಬೆಂಗಳೂರನ್ನು ಹೊರತುಪಡಿಸಿದರೆ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಒಳಾಂಗಣ ಕ್ರೀಡಾಂಗಣ ಗದಗದಲ್ಲಿರುವುದು ಜಿಲ್ಲೆಯ ಕ್ರೀಡಾಪಟುಗಳಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ಗದಗದ ಯುವಕರು ಹಾಕಿ ಮಾತ್ರವಲ್ಲದೆ ಸೈಕ್ಲಿಂಗ್, ಕುಸ್ತಿ, ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ ಹಾಗೂ ಕರಾಟೆ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಇಂತಹ ಪ್ರತಿಭೆಗಳಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ಮತ್ತು ಅಗತ್ಯ ಮೂಲಸೌಕರ್ಯ ಕಲ್ಪಿಸಿದರೆ ಇನ್ನಷ್ಟು ಕ್ರೀಡಾಪಟುಗಳು ಉನ್ನತ ಮಟ್ಟದಲ್ಲಿ ಹೊರಹೊಮ್ಮಲಿದ್ದಾರೆ ಎಂದು ತಿಳಿಸಿದರು.

ಸರ್ಕಾರ ನಿರ್ಮಿಸಿರುವ ಕ್ರೀಡಾಂಗಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅವುಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಪೋಷಕರು ಮಕ್ಕಳನ್ನು ಕ್ರೀಡಾ ಕ್ಷೇತ್ರದತ್ತ ಪ್ರೋತ್ಸಾಹಿಸುವ ಮೂಲಕ ಅವರ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಾಬರ್ಚಿ ಹಾಕಿ ಪಂದ್ಯಗಳಿಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯದಲ್ಲಿಯೇ ಮಾದರಿಯಾಗುವಂತಹ ಮಹತ್ವದ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಕಬಡ್ಡಿ, ಕುಸ್ತಿ, ಹಾಕಿ, ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಅಗತ್ಯವಿರುವ ಸುಸಜ್ಜಿತ ಕ್ರೀಡಾಂಗಣಗಳು ಹಾಗೂ ಮೂಲಸೌಕರ್ಯಗಳನ್ನು ನಿರ್ಮಿಸಲಾಗಿದ್ದು, ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಮತ್ತು ಅಭ್ಯಾಸಕ್ಕೆ ಅನುಕೂಲಕರ ವಾತಾವರಣ ಕಲ್ಪಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೆರಿ, ಎಚ್.ಬಿ. ವೀರಾಪುರ, ವಾಯ್.ಜಿ. ಗಡದ, ಸುರೇಶ್ ಕಟ್ಟಿಮನಿ, ಮಾರುತಿ ಮುಟಗಾರ, ವಸಂತ ಕಲಕಾಂಬಿ, ಡಾ. ಪ್ರವೀಣ ಚಪ್ಪರಮನಿ, ಮಂಜುನಾಥ ಬಾಗಲಕೋಟಿ, ಶಿವರಾಜ ಕೊರಶ್, ವಿಶ್ವಾಸ ಗಂಗಡೆ, ವಾಯ್.ಕೆ. ಚೌಡಾಪುರ, ಲಕ್ಷ್ಮಣ ಬಾಗಲಕೋಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಾಹುಬಲಿ ಜೈನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಗದಗ ಜಿಲ್ಲೆಯಲ್ಲಿ ಕ್ರೀಡಾ ಪ್ರತಿಭೆಗಳಿಗೆ ಯಾವುದೇ ಕೊರತೆಯಿಲ್ಲ. ಸೂಕ್ತ ಅವಕಾಶ, ತರಬೇತಿ ಮತ್ತು ಪ್ರೋತ್ಸಾಹ ದೊರೆತರೆ ಜಿಲ್ಲೆಯ ಇನ್ನಷ್ಟು ಯುವ ಕ್ರೀಡಾಪಟುಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಗದಗದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿದ್ದಾರೆ.

ಬಿ.ಬಿ. ಆಸೂಟಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img