ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಓರ್ವ ಪ್ರವಾಸಿಯ ಶವ ಇಂದು ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ.
ಒರಿಸ್ಸಾ ಮೂಲದ ಬೀಬಾಷಾ ಮೃತ ದುರ್ಧೈವಿಯಾಗಿದ್ದು, ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಗುರುವಾರ ರಾತ್ರಿ ಸಂಗೀತ ಆಲಿಸುತ್ತಾ ಕುಳಿತ್ತಿದ್ದ ನಾಲ್ವರ ಮೇಲೆ ಹಲ್ಲೆ ನಡೆದಿತ್ತು. ನಾಲ್ವರ ಪೈಕಿ ಓರ್ವ ನಾಪತ್ತೆಯಾಗಿದ್ದನು.
ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಕಾಲುವೆಯಲ್ಲಿ ಹುಡುಕಾಟ ನಡೆಸಿದ್ದರು. 24 ಗಂಟೆಗಳ ಬಳಿಕ ಕಾಲುವೆಯಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು, ಶವವನ್ನು ಹೊರತೆಗೆದಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ರವಾನಿಸಲಾಗಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.