ಗದಗ:- ಅಕ್ರಮ ಪಟಾಕಿ ಸಂಗ್ರಹ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಲಕ್ಷಾಂತರ ಮೌಲ್ಯದ ಪಟಾಕಿ ಜಪ್ತಿ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಜರುಗಿದೆ.
ಇಲ್ಲಿನ ರಾಮಚಂದ್ರಸಾ ಸಿದ್ಲಿಂಗ್ ಎಂಬುವರ ಮನೆ ಮೇಲೆ ನಡೆದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಪಟಾಕಿ ವಶಕ್ಕೆ ಪಡೆಯಲಾಗಿದೆ. ಹೌದು, ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿ ಸಂಗ್ರಹಿಸಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ದಾಳಿ ನಡೆಸಿದ್ದು, ಲಕ್ಷಾಂತರ ಮೌಲ್ಯದ ಪಟಾಕಿ ವಶಕ್ಕೆ ಪಡೆಯಲಾಗಿದೆ.
ಈ ಮನೆಯಲ್ಲಿ ಕಳೆದ ಹತ್ತು ಹದಿನೈದು ವರ್ಷಗಳಿಂದ ಅಕ್ರಮವಾಗಿ ಪಟಾಕಿ ಸಂಗ್ರಹಿಸಿರುವ ಆರೋಪ ಕೇಳಿ ಬಂದಿದೆ. ಪ್ರತಿವರ್ಷ ಗಣೇಶೋತ್ಸವ ಹಾಗೂ ದೀಪಾವಳಿ ಸಂದರ್ಭದಲ್ಲಿ ಆಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲಾಗುತ್ತದೆ. ಇದರಿಂದ ದಾಸರ ಗಲ್ಲಿಯಲ್ಲಿ ಸಾರ್ವಜನಿಕರು ಜೀವಹಿಡಿದುಕೊಂಡೇ ಜೀವನ ನಿರ್ವಹಣೆ ಮಾಡುವಂತಾಗಿದೆ.
ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.