ಬೆಳಗಾವಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ಈ ಕ್ರಮವನ್ನು DGCA ಮಾರ್ಗಸೂಚಿಯಂತೆ ಕೈಗೊಳ್ಳಲಾಗಿದೆ.
ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್ಮ್ಯಾನ್ಡ್ ಏರಿಯಲ್ ವಾಹನಗಳ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರೆಡ್ ಝೋನ್ ಹಾಗೂ ಯೆಲ್ಲೋ ಝೋನ್ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಈ ಕುರಿತು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಮಾನ ನಿಲ್ದಾಣದ ಭದ್ರತೆ ದೃಷ್ಟಿಯಿಂದ ಈ ಕ್ರಮ ಅತ್ಯಾವಶ್ಯಕವಾಗಿದ್ದು, ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.



