ಬೆಂಗಳೂರು: ಸಾಲು ಸಾಲು ಅಕ್ರಮಗಳ ಆರೋಪಗಳ ಬಳಿಕ ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಸಕಲ ಸಿದ್ಧತೆ ಮಾಡಿಕೊಂಡಿದೆ.

ರಾಜ್ಯದ 15 ಜಿಲ್ಲೆಗಳ 345 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯಲಿದ್ದು, 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗಾಗಿ 1.47 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಆಯೋಗ ಈ ಬಾರಿ ಹಲವು ಕಟ್ಟುನಿಟ್ಟಿನ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಮೇಲೆ ನಿಗಾ ಇರಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಪ್ರವೇಶ, ಅಭ್ಯರ್ಥಿಗಳ ತಪಾಸಣೆ ಹಾಗೂ ಮೇಲ್ವಿಚಾರಣೆ ಸೇರಿದಂತೆ ಪ್ರತಿಯೊಂದು ಹಂತದಲ್ಲೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.
319 ಹುದ್ದೆಗಳಿಗೆ ಪರೀಕ್ಷೆ:
ಒಟ್ಟು 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೈಕಿ 202 ಗ್ರೂಪ್ ಬಿ ಹಾಗೂ 117 ಗ್ರೂಪ್ ಎ ಹುದ್ದೆಗಳಿವೆ. ಪರೀಕ್ಷೆಗೆ 1.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಇವರಲ್ಲಿ 91,238 ಪುರುಷರು ಹಾಗೂ 53,074 ಮಹಿಳಾ ಅಭ್ಯರ್ಥಿಗಳಿದ್ದಾರೆ.
ಬೆಂಗಳೂರು ನಗರ, ಮೈಸೂರು, ಕಲಬುರಗಿ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ ಹಾಗೂ ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ.
ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಎರಡನೇ ಪತ್ರಿಕೆ ನಡೆಯಲಿದೆ. ಪ್ರತಿ ಪತ್ರಿಕೆಯಲ್ಲಿ 100 ಪ್ರಶ್ನೆಗಳಿದ್ದು, ತಲಾ 200 ಅಂಕಗಳನ್ನು ನಿಗದಿಪಡಿಸಲಾಗಿದೆ.
ಪರೀಕ್ಷೆಗೆ ಹೊಸ ನಿಯಮಗಳೇನು?
ಈ ಬಾರಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೆಪಿಎಸ್ಸಿ ಹಲವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಇವರಲ್ಲಿ ಒಬ್ಬರು ಕಡ್ಡಾಯವಾಗಿ ಸರ್ಕಾರಿ ಕಾಲೇಜಿನ ಸಿಬ್ಬಂದಿಯಾಗಿರಬೇಕು. ಅಭ್ಯರ್ಥಿಗಳ ಗುರುತಿನ ಚೀಟಿ ಪರಿಶೀಲನೆ, ತಪಾಸಣೆ ಹಾಗೂ ಪರೀಕ್ಷಾ ಕೊಠಡಿಯ ಹಿಂಭಾಗದಿಂದಲೂ ನಿಗಾ ವಹಿಸುವ ಜವಾಬ್ದಾರಿಯನ್ನು ಮೇಲ್ವಿಚಾರಕರು ನಿರ್ವಹಿಸಲಿದ್ದಾರೆ.
ಪರೀಕ್ಷಾ ಕೇಂದ್ರದ ಆವರಣಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅನುಮತಿ ಪಡೆದವರಿಗೂ ಭದ್ರತಾ ತಪಾಸಣೆ ಕಡ್ಡಾಯವಾಗಿದ್ದು, ಅಭ್ಯರ್ಥಿಗಳು ಮೊಬೈಲ್ ಫೋನ್ಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವಂತಿಲ್ಲ. ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ ಮೊಬೈಲ್ ಜಾಮರ್ಗಳನ್ನು ಅಳವಡಿಸಲಾಗಿದೆ.
ಐದು ಆಯ್ಕೆಗಳ ಪದ್ಧತಿ ಜಾರಿ:
ಈ ಬಾರಿ ಉತ್ತರ ಪತ್ರಿಕೆಯಲ್ಲಿ ಮೊದಲ ಬಾರಿಗೆ ಐದು ಆಯ್ಕೆಗಳ ಪದ್ಧತಿಯನ್ನು ಪರಿಚಯಿಸಲಾಗಿದೆ. ಅಭ್ಯರ್ಥಿಗಳಿಗೆ ಪ್ರಶ್ನೆಯ ಉತ್ತರ ತಿಳಿದಿಲ್ಲದಿದ್ದರೂ ಐದನೇ ಆಯ್ಕೆಯನ್ನು ಕಡ್ಡಾಯವಾಗಿ ಗುರುತಿಸಬೇಕು. ಯಾವುದೇ ಪ್ರಶ್ನೆಯನ್ನು ಖಾಲಿ ಬಿಡುವಂತಿಲ್ಲ.
ಇದರ ಜೊತೆಗೆ ತ್ರಿಪ್ರತಿ ಒಎಂಆರ್ ಹಾಳೆ ವ್ಯವಸ್ಥೆ ಜಾರಿಗೆ ತರಲಾಗಿದೆ. ಒಂದು ಪ್ರತಿಯನ್ನು ಅಭ್ಯರ್ಥಿಗೆ ನೀಡಲಾಗುತ್ತದೆ. ಮತ್ತೊಂದು ಪ್ರತಿಯನ್ನು ಮೌಲ್ಯಮಾಪನಕ್ಕಾಗಿ ಕೆಪಿಎಸ್ಸಿ ಬಳಸಲಿದೆ. ಮೂರನೇ ಪ್ರತಿಯನ್ನು ಜಿಲ್ಲಾಧಿಕಾರಿ ಅಥವಾ ಕೆಪಿಎಸ್ಸಿ ಸ್ಟ್ರಾಂಗ್ ರೂಮ್ನಲ್ಲಿ ಸುರಕ್ಷಿತವಾಗಿ ಇರಿಸಲಾಗುತ್ತದೆ.
ಪರೀಕ್ಷೆ ನಡೆದ ದಿನವೇ ಒಎಂಆರ್ ಅಪ್ಲೋಡ್:
ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಪರೀಕ್ಷೆ ನಡೆದ ದಿನವೇ ಸ್ಕ್ಯಾನ್ ಮಾಡಿದ ಎಲ್ಲಾ ಒಎಂಆರ್ ಪ್ರತಿಗಳನ್ನು ಕೆಪಿಎಸ್ಸಿ ವೆಬ್ಸೈಟ್ನಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅಪ್ಲೋಡ್ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 12 ಜಿಲ್ಲೆಗಳಲ್ಲಿ ಒಎಂಆರ್ ಹಾಳೆಗಳನ್ನು ಸ್ಕ್ಯಾನ್ ಮಾಡುವ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ, ಅವ್ಯವಹಾರಕ್ಕೆ ಅವಕಾಶ ನೀಡುವ ಖಾಸಗಿ ಕಾಲೇಜುಗಳ ಪರವಾನಗಿ ರದ್ದುಗೊಳಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಮುಂದಿನ ಪರೀಕ್ಷೆಗಳಲ್ಲಿ ನಕಲಿ ಅಭ್ಯರ್ಥಿಗಳ ಹಾವಳಿ ತಡೆಯಲು ಇ-ಆಡಳಿತ ಇಲಾಖೆಯ ಮೂಲಕ ಆಧಾರ್ ಆಧಾರಿತ ಗುರುತಿನ ಪರಿಶೀಲನೆ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದೆ.







