ಬೆಂಗಳೂರು: ಬೆಳಗಾವಿ ಪೊಲೀಸರ ಲುಕ್ಔಟ್ ನೋಟಿಸ್ ಹಿನ್ನೆಲೆಯಲ್ಲಿ ‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
ರವಿ ಹಂಜ್ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯ ಭಾಗವಾಗಿ ಪೊಲೀಸರು ಈ ಹಿಂದೆ ಅವರ ವಿರುದ್ಧ ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದರು.
ಲುಕ್ಔಟ್ ನೋಟಿಸ್ ಹಿನ್ನೆಲೆಯಲ್ಲಿ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಅವರನ್ನು ತಡೆದ ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಬಳಿಕ ಈ ಕುರಿತು ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ.
ಸದ್ಯ ಬೆಳಗಾವಿ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆ ಕೈಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ. ರವಿ ಹಂಜ್ ಅವರನ್ನು ತಮ್ಮ ವಶಕ್ಕೆ ಪಡೆಯುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದಿನ ಕ್ರಮ ಹಾಗೂ ತನಿಖೆಯ ಬೆಳವಣಿಗೆಗಳ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.









