ಬೆಂಗಳೂರು: ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರ್ಕೆಟ್ನಲ್ಲಿ ಜನಸಂದಣಿ ಹೆಚ್ಚಾಗಿದೆ.
ಪೂಜೆಗೆ ಅಗತ್ಯವಾದ ಹೂವು, ಹಣ್ಣು, ನಿಂಬೆಹಣ್ಣು, ಕುಂಬಳಕಾಯಿ, ಬಾಳೆಕಂದು ಸೇರಿದಂತೆ ವಿವಿಧ ಸಾಮಗ್ರಿಗಳನ್ನು ಖರೀದಿಸಲು ಜನರು ಮಧ್ಯರಾತ್ರಿಯಿಂದಲೇ ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ.
ಬೆಂಗಳೂರಿನ ಸುತ್ತಮುತ್ತಲಿನ ರೈತರು ತಾಜಾ ಹೂವು ಸೇರಿದಂತೆ ವಿವಿಧ ಪೂಜಾ ಸಾಮಗ್ರಿಗಳನ್ನು ಮಾರುಕಟ್ಟೆಗೆ ತರುತ್ತಿರುವುದರಿಂದ ಖರೀದಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ವ್ಯಾಪಾರವೂ ಜೋರಾಗಿ ನಡೆಯುತ್ತಿದೆ.
ಇನ್ನೊಂದೆಡೆ, ಜನಜಂಗುಳಿಯಿಂದಾಗಿ ಕೆ.ಆರ್. ಮಾರ್ಕೆಟ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಅವಿನ್ಯೂ ರಸ್ತೆ ಹಾಗೂ ಕೆ.ಆರ್. ಮಾರ್ಕೆಟ್ನಿಂದ ಟೌನ್ ಹಾಲ್ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವ್ಯಾಪಾರಿಗಳು ರಸ್ತೆ ಬದಿಯಲ್ಲಷ್ಟೇ ಅಲ್ಲದೆ, ರಸ್ತೆಯ ಮೇಲೂ ವ್ಯಾಪಾರ ನಡೆಸುತ್ತಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ.
ಇದರಿಂದ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿದ್ದು, ಆಂಬ್ಯುಲೆನ್ಸ್ ಸಂಚಾರಕ್ಕೂ ತೊಂದರೆಯಾಗುತ್ತಿದೆ. ಹಬ್ಬದ ಸಂಭ್ರಮದ ನಡುವೆ ಮಾರುಕಟ್ಟೆ ಸುತ್ತಮುತ್ತ ಸಂಚಾರ ವ್ಯವಸ್ಥೆ ಸುಗಮಗೊಳಿಸುವುದು ಸವಾಲಾಗಿ ಪರಿಣಮಿಸಿದೆ.



