ಬೆಂಗಳೂರು: ಅನುಮಾನಾಸ್ಪದವಾಗಿ ಆಯುರ್ವೇದಿಕ್ ವೈದ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ನಗರದ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಾಜರಹಳ್ಳಿ ನಿವಾಸಿ ಶೂಲಿ ಮಂಡೋಲಿ (32) ಮೃತ ವೈದ್ಯೆಯಾಗಿದ್ದಾರೆ.
ಡಿಸೆಂಬರ್ 19ರಂದು ಅನಾರೋಗ್ಯದ ಹಿನ್ನೆಲೆ ಶೂಲಿ ಮಂಡೋಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಬಂದಿದ್ದರು. ಆದರೆ ಮರುದಿನ ಮತ್ತೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಸಾವಿನ ಬಗ್ಗೆ ಮೃತಳ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಪತಿ ಅನೀರ್ ಬನ್ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂಬ ಆರೋಪವನ್ನು ಕುಟುಂಬಸ್ಥರು ಮಾಡಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಾವಿನ ನಿಖರ ಕಾರಣ ತಿಳಿಯಲು ಪೋಸ್ಟ್‌ಮಾರ್ಟಂ ವರದಿ ಮತ್ತು ಇತರ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.



