RSS ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಿ: ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

0
Spread the love

ಬೆಂಗಳೂರು: RSS ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಿ ಎಂದು ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ, 1966 ಅನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದಾರೆ. ಈ ನಿಯಮಗಳಡಿ, ನಿಯಮ 5(1)ರ ಪ್ರಕಾರ ಹಲವು ನಿಬಂಧನೆಗಳು ಈಗಾಗಲೇ ಜಾರಿಯಲ್ಲಿವೆ.

Advertisement

ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ. ಅಥವಾ ಅವುಗಳೊಂದಿಗೆ ಯಾವುದೇ ರೀತಿಯ ಸಂಬಂಧ ಹೊಂದಿರತಕ್ಕದ್ದಲ್ಲ. ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ. ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ.

ಈ ನಿಯಮಗಳು ಬಹಳ ಹಿಂದೆಯೇ ಜಾರಿಯಲ್ಲಿದ್ದರೂ, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಭಾಗವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.

ಸರ್ಕಾರಿ ನೌಕರರ ನಡತೆ ನಿಯಮಗಳ ಉಲ್ಲಂಘನೆಯು ಆಡಳಿತದ ತಟಸ್ಥತೆ ಮತ್ತು ನಿಷ್ಪಕ್ಷಪಾತಕ್ಕೆ ಧಕ್ಕೆ ತರುತ್ತದೆ ಎಂದು ಸಚಿವರು ತಮ್ಮ ಪತ್ರದಲ್ಲಿ ಹೇಳಿದ್ದಾರೆ. ರಾಜ್ಯದ ಆಡಳಿತ ಯಂತ್ರವು ಜಾತ್ಯಾತೀತ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕು. ಸರ್ಕಾರಿ ನೌಕರರು ಯಾವುದೇ ನಿರ್ದಿಷ್ಟ ರಾಜಕೀಯ ಅಥವಾ ರಾಜಕೀಯೇತರ ಸಿದ್ಧಾಂತದ ಸಂಘಟನೆಗಳ ಚಟುವಟಿಕೆಗಳಲ್ಲಿ ಭಾಗವಹಿಸುವುದು ನಿಯಮ ಉಲ್ಲಂಘನೆಯಾಗಲಿದೆ ಎಂದು ಅವರು ಒತ್ತಿ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here