ಪರಿಸರಕ್ಕೆ ಹಾನಿ ಮಾಡುವ ಪಟಾಕಿಗಳ ಮಾರಾಟ, ಬಳಕೆ ನಿಷೇಧ

0
Spread the love

ವಿಜಯಸಾಕ್ಷಿ ಸುದ್ದಿ, ಡಂಬಳ: ಮುಂಡರಗಿ ತಾಲೂಕಿನಲ್ಲಿ ಗದಗ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗದಿಪಡಿಸಿರುವ ಮಾನದಂಡಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮುಂಡರಗಿ ತಾಲೂಕ ತಹಸೀಲ್ದಾರ್ ಯರಿಸ್ವಾಮಿ ಪಿ.ಎಸ್. ಕೋರಿದ್ದಾರೆ.

Advertisement

ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳಿಗೆ ಸಂಬಂಧಪಟ್ಟ ಎಲ್ಲ ಇಲಾಖೆಯ ಅನುಮತಿ ಪಡೆಯತಕ್ಕದ್ದು.

ದಿನದ ಯಾವುದೇ ಸಮಯದಲ್ಲಿ ನಿಶ್ಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಲ್ಲಿ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮಗಳ ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ ಹಾಗೂ ವಾಯು ಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು ‘ಹಸಿರು ದೀಪಾವಳಿ–ಸ್ವಸ್ಥ ದೀಪಾವಳಿ: ಪರಿಸರ ಸ್ನೇಹಿ ದೀಪಾವಳಿ’ಯನ್ನಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ಮುಂಡರಗಿ ತಹಸೀಲ್ದಾರ್ ಯರಿಸ್ವಾಮಿ ಪಿ.ಎಸ್. ಕೋರಿದ್ದಾರೆ.

ಬಾಕ್ಸ್

125 ಡೆಸಿಬಲ್‌ಗಳಿಗಿಂತ ಹೆಚ್ಚು ಶಬ್ದ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಸರ್ವೋಚ್ಚ ನ್ಯಾಯಾಲಯ ಹಾಗೂ ಹಸಿರು ನ್ಯಾಯ ಪೀಠದ ಆದೇಶದಂತೆ ಎಲ್ಲ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್‌ಕೋಡ್ ಇರುವ ಹಸಿರು ಪಟಾಕಿ — ಕಡಿಮೆ ಮಾಲಿನ್ಯ ಉಂಟುಮಾಡುವ ಪಟಾಕಿ ಮಾತ್ರ ಮಾರಾಟ ಮಾಡುವುದು.


Spread the love

LEAVE A REPLY

Please enter your comment!
Please enter your name here