ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಾಲಾ-ಕಾಲೇಜುಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಂತ್ರಣಕ್ಕೆ ಶಿರಹಟ್ಟಿಯಲ್ಲಿ ಗುರುವಾರ ಕೋಟ್ಪಾ (COTPA-2003) ಕಾಯ್ದೆಯಡಿ ವಿಶೇಷ ದಾಳಿ ನಡೆಸಿ ನಿಯಮ ಉಲ್ಲಂಘಿಸಿದ ಮಾರಾಟಗಾರರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.
ತಹಸೀಲ್ದಾರ್ ಕೆ. ರಾಘವೇಂದ್ರರಾವ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಅಂಗಡಿಗಳನ್ನು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ತಹಸೀಲ್ದಾರ್ ಕೆ. ರಾಘವೇಂದ್ರರಾವ್, ಕೋಟ್ಪಾ ಕಾಯ್ದೆಯ ಸೆಕ್ಷನ್ 6(ಬಿ) ಪ್ರಕಾರ ಶಾಲೆ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ. ಆದರೂ ಕೆಲವು ಅಂಗಡಿಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದ್ದು, ಅಂತಹ ಅಂಗಡಿಗಳಿಗೆ ದಂಡ ವಿಧಿಸಿ ತಕ್ಷಣವೇ ಮಾರಾಟ ನಿಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಉಗುಳುವುದೂ ನಿಷೇಧವಾಗಿದೆ. ಹೋಟೆಲ್, ಪಾನ್‌ಬೀಡಾ ಅಂಗಡಿ, ಬಾರ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ತಂಬಾಕು ನಿಷೇಧಿತ ಪ್ರದೇಶ ಹಾಗೂ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಂಬಾಕು ಉತ್ಪನ್ನ ಮಾರಾಟ ನಿಷೇಧದ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ನಿಯಮ ಉಲ್ಲಂಘನೆ ಮುಂದುವರಿದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ತಂಬಾಕು ಸೇವನೆ ಮತ್ತು ಪರೋಕ್ಷ ಧೂಮಪಾನದಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಸೇರಿದಂತೆ ಹಲವು ಮಾರಣಾಂತಿಕ ಕಾಯಿಲೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ಜಾಗೃತಿ ಮೂಡಿಸಲಾಯಿತು.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಗೋಪಾಲ ಸುರಪುರ, ಡಾ. ಪವನ ಪಾಯದೆ, ಎಎಸ್‌ಐ ಎಂ.ಎನ್. ಅಯ್ಯನಗೌಡರ, ಎಂ.ಹೆಚ್. ನಾಯ್ಕರ್, ಬಸಮ್ಮ ಚಿತ್ತರಗಿ, ಗಿರೀಶ್ ವೀರನಗೌಡರ, ರಮೇಶ್, ಎಸ್. ಮಹೇಶ್, ಅಭಿನಂದನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
“ಶಾಲೆ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.”
– ಕೆ. ರಾಘವೇಂದ್ರರಾವ್, ತಹಸೀಲ್ದಾರ್, ಶಿರಹಟ್ಟಿ



