ಬೆಂಗಳೂರು: ಬ್ರೂಕ್‌ಫೀಲ್ಡ್‌ನಲ್ಲಿರುವ ಬೇಬಿ ಕೇರ್ ಕೇಂದ್ರದಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಎಲ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಗಳಾದ ಮಂಜುಳಾ ಹಾಗೂ ವಿಜಯಲಕ್ಷ್ಮೀ ರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಲಾಗಿದೆ.
ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಭವಾನಿ, ಸಿಂಧು ಹಾಗೂ ಬಿಂದು ಅವರ ಪಾತ್ರದ ಕುರಿತು ಪ್ರಾಥಮಿಕ ತನಿಖೆಯಲ್ಲಿ ಸ್ಪಷ್ಟ ಸಾಕ್ಷ್ಯಗಳು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಹೆಚ್ಚಿನ ವಿಚಾರಣೆಗಾಗಿ ಈ ಮೂವರಿಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಬ್ರೂಕ್‌ಫೀಲ್ಡ್‌ನ ಬೇಬಿ ಕೇರ್ ಕೇಂದ್ರದಲ್ಲಿ ಮಕ್ಕಳಿಗೆ ಆಯಾಗಳು ದೈಹಿಕವಾಗಿ ಹಿಂಸೆ ನೀಡುತ್ತಿರುವ ದೃಶ್ಯಗಳು ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಈ ವಿಡಿಯೊಗಳನ್ನು ಮಕ್ಕಳ ಸಹಾಯವಾಣಿ (ಚೈಲ್ಡ್ ಹೆಲ್ಪ್‌ಲೈನ್) ಅಧಿಕಾರಿಗಳು ಪರಿಶೀಲಿಸಿ, ಮಕ್ಕಳ ಮೇಲೆ ಕ್ರೌರ್ಯ ಎಸಗಿರುವ ಆರೋಪದಡಿ ಹೆಚ್‌ಎಎಲ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ದೂರಿನ ಆಧಾರದ ಮೇಲೆ ಮಂಜುಳಾ, ವಿಜಯಲಕ್ಷ್ಮೀ, ಭವಾನಿ, ಸಿಂಧು ಹಾಗೂ ಬಿಂದು ಸೇರಿ ಐವರು ಆಯಾಗಳ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಉಳಿದ ಆರೋಪಿಗಳ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ತನಿಖೆಯ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.



