ಬೆಂಗಳೂರು:- ಬ್ಯಾಂಕ್ ವಂಚನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಹಿನ್ನೆಲೆ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಸೇರಿ ನಾಲ್ವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಸದ್ಯ ಸಿಬಿಐ ಅಧಿಕಾರಿಗಳು ಆರೋಪಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಹಾಗೂ ಮುನಿರಾಜು ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ. ಇವರೆಲ್ಲಾ ಸೇರಿ ಸರ್ಕಾರಿ ನೌಕರರ ಹೆಸರಲ್ಲಿ ನಕಲಿ ದಾಖಲೆಗಳನ್ನು ಅಕ್ರಮವಾಗಿ ಸೃಷ್ಟಿ ಮಾಡಿದ್ದರು. ಬಳಿಕ ಈ ದಾಖಲೆಗಳಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದುಕೊಂಡಿದ್ದರು.
ಕೋಟ್ಯಂತರ ರೂಪಾಯಿ ಸಾಲ ಪಡೆದಿರುವುದು ಬಹಿರಂಗವಾದ ಮೇಲೆ ಠಾಣೆಯಲ್ಲಿ ಐಪಿಸಿ 120ಬಿ, 409, 420, 467, 468, 471 ಅಡಿ ಕೇಸ್ ದಾಖಲು ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ಕೋರ್ಟ್, ಕೃಷ್ಣಯ್ಯಶೆಟ್ಟಿ ಸೇರಿ ನಾಲ್ವರು ತಪ್ಪಿತಸ್ಥರು ಎಂದು ತೀರ್ಪು ನೀಡಿದೆ.