ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಉನ್ನತ ಪೊಲೀಸ್ ಅಧಿಕಾರಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿದ್ದ ಬೆನ್ನಲ್ಲೇ, ಬಳ್ಳಾರಿ ವಲಯ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇದೇ ವೇಳೆ ಬಳ್ಳಾರಿ ವಲಯದ ನೂತನ ಐಜಿ ಆಗಿ ಹರ್ಷ ಗುಪ್ತಾ ಅವರನ್ನು ಹಾಗೂ ನೂತನ ಎಸ್ಪಿ ಆಗಿ ಡಾ. ಸುಮನ ಡಿ. ಪೆನ್ನೇಕರ್ ಅವರನ್ನು ನೇಮಕ ಮಾಡಲಾಗಿದೆ.
ಜನವರಿ 1ರಂದು ಬಳ್ಳಾರಿ ಎಸ್ಪಿಯಾಗಿ ಪವನ್ ನೆಜ್ಜೂರು ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಆದರೆ ಬ್ಯಾನರ್ ಗಲಾಟೆ ಪ್ರಕರಣವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿಲ್ಲ ಎಂಬ ಆರೋಪದ ಮೇಲೆ ಅವರನ್ನು ಅಮಾನತು ಮಾಡಲಾಗಿತ್ತು.
ಅಲ್ಲದೇ, ಈ ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ರೇಂಜ್ ಐಜಿ ಆಗಿದ್ದ ವರ್ತಿಕಾ ಕಟಿಯಾರ್ ವಿರುದ್ಧ ಡಿಜಿ–ಐಜಿಪಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಅದರ ಆಧಾರದ ಮೇಲೆ ಇದೀಗ ರಾಜ್ಯ ಸರ್ಕಾರ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿದೆ.



