ಬೆಂಗಳೂರು: ವಿದ್ಯಾರ್ಥಿಗಳು ನೆಮ್ಮದಿಯಿಂದ ವಿದ್ಯಾಭ್ಯಾಸ ನಡೆಸಬೇಕಾದ ವಿದ್ಯಾರ್ಥಿ ನಿಲಯದ ಕಟ್ಟಡದ ನೆಲ ಮಹಡಿಯಲ್ಲೇ ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ವ್ಯಾಪ್ತಿಯ ಅವಲಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವು ಖಾಸಗಿ ಕಟ್ಟಡದಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಇದೇ ಕಟ್ಟಡದ ನೆಲ ಮಹಡಿಯಲ್ಲಿ ಮೂರು ತಿಂಗಳ ಹಿಂದೆ ಬಾರ್ ಅಂಡ್ ರೆಸ್ಟೋರೆಂಟ್ ಆರಂಭವಾಗಿದ್ದು, ಮೇಲಿನ ಮಹಡಿಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ.
ಬಾರ್ ಆರಂಭವಾದ ಬಳಿಕ ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಹಗಲು-ರಾತ್ರಿ ಬಾರ್ಗೆ ಬರುವ ಗ್ರಾಹಕರ ಗದ್ದಲ, ಗಲಾಟೆ ಹಾಗೂ ಶಬ್ದ ಮಾಲಿನ್ಯದಿಂದ ಓದು ಮತ್ತು ನಿದ್ರೆಗೆ ತೀವ್ರ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ವಿದ್ಯಾಭ್ಯಾಸಕ್ಕೆ ಅಗತ್ಯವಾದ ಶಾಂತ ವಾತಾವರಣ ಇಲ್ಲದ ಕಾರಣ ವಿದ್ಯಾರ್ಥಿ ನಿಲಯವನ್ನು ತಕ್ಷಣವೇ ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಈ ಕುರಿತು ಹಲವು ಬಾರಿ ಗಮನಕ್ಕೆ ತಂದರೂ ಹಾಸ್ಟೆಲ್ ವಾರ್ಡನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ವಿದ್ಯಾರ್ಥಿಗಳ ಶಿಕ್ಷಣ ಮತ್ತು ಹಿತಾಸಕ್ತಿಯ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.



