ಬೆಂಗಳೂರು:- ನಗರದಲ್ಲಿ ಡ್ರಗ್ಸ್ ಶೇಖರಣೆ ಹಾಗೂ ಪೆಡ್ಲಿಂಗ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಬೆಂಗಳೂರು ಈಶಾನ್ಯ ವಿಭಾಗದ ಪೊಲೀಸರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ವಿದೇಶಿಗರಿಗೆ ಮನೆ ಬಾಡಿಗೆ ನೀಡುವ ಮೊದಲು ಕಡ್ಡಾಯವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಫಾರ್ಮ್–16 ಸಲ್ಲಿಸಬೇಕು ಎಂದು ಸೂಚಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ಮನೆ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಇತ್ತೀಚೆಗೆ ವೀಸಾ ಅವಧಿ ಮುಗಿದರೂ ನಗರದಲ್ಲೇ ತಂಗುತ್ತಿರುವ ಹಾಗೂ ವಿದ್ಯಾರ್ಥಿ ವೀಸಾದ ಮೇಲೆ ಬಂದು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ವಿದೇಶಿಗರ ಪ್ರಕರಣಗಳು ಪತ್ತೆಯಾಗಿರುವುದರಿಂದ, ಅವರ ಚಲನವಲನದ ಮೇಲೆ ನಿಗಾ ವಹಿಸಲಾಗುತ್ತಿದೆ. ಈ ನಿಯಮಗಳ ಮೂಲಕ ಬಾಡಿಗೆ ಮನೆಗಳಲ್ಲಿ ವಾಸಿಸುವವರ ಮಾಹಿತಿ ಪೊಲೀಸರಿಗೆ ಲಭ್ಯವಾಗಲಿದ್ದು, ನಗರದಲ್ಲಿನ ಅಕ್ರಮ ಚಟುವಟಿಕೆಗಳಿಗೆ ತಡೆ ಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.



