ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ನೀಡಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಈ ಪ್ರಕರಣದಲ್ಲಿ ಒಟ್ಟು 107 ಜನರಿಗೆ ನೋಟಿಸ್ ನೀಡಲಾಗಿದ್ದು,
ಅವರಲ್ಲಿ 30ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಎಂಬುದು ತಿಳಿದುಬಂದಿದೆ. ಈ 107 ಮಂದಿಯಲ್ಲಿ ಬಹುತೇಕರು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಗಲಭೆ ಸಂದರ್ಭದ ವಿಡಿಯೋ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿರುವ ಸಂದರ್ಭದಲ್ಲಿ ತಮ್ಮದೇ ಪಕ್ಷದ ಕಾರ್ಯಕರ್ತರಿಗೆ ನೋಟಿಸ್ ನೀಡಿರುವುದು ಗಮನ ಸೆಳೆದಿದೆ. ಈ ಹಿಂದೆ ಈ ಪ್ರಕರಣದಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಮಾತ್ರ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಆದರೆ ಇದೀಗ ಕಾಂಗ್ರೆಸ್ ಕಾರ್ಯಕರ್ತರಿಗೂ ನೋಟಿಸ್ ನೀಡಿರುವ ಮೂಲಕ ಪೊಲೀಸರು ಪಕ್ಷಾತೀತವಾಗಿ ಕ್ರಮ ಕೈಗೊಳ್ಳುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಇದರ ಜೊತೆಗೆ ಬಿಜೆಪಿ ಕಾರ್ಯಕರ್ತರಿಗೂ ನೋಟಿಸ್ ನೀಡಲಾಗಿದೆ. ಮತ್ತೆ ಬಿಜೆಪಿ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದು, ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ರಾಮುಲು ಸೇರಿದಂತೆ ಒಟ್ಟು 33 ಬಿಜೆಪಿ ನಾಯಕರಿಗೆ ನೋಟಿಸ್ ಜಾರಿಯಾಗಿದೆ. ಈ ವಿಷಯವು ಮುಂದಿನ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಈಗಾಗಲೇ 26 ಮಂದಿಯನ್ನು ಬಂಧಿಸಿದ್ದಾರೆ. ಇದಲ್ಲದೆ, ರೆಡ್ಡಿ ಆಪ್ತರಾಗಿರುವ ಸುರೇಶ್ ಬಾಬು ಅವರನ್ನು ಕೂಡ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಬಳ್ಳಾರಿ ಗಲಭೆ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ನಾಯಕರ ಮೇಲೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



