ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಬೆಳಿಗ್ಗೆ ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ಧ್ವಜಾರೋಹಣದ ನಂತರ ರಾಜ್ಯಪಾಲರು ಪೊಲೀಸ್ ಪಡೆಗಳಿಂದ ವಂದನಾ ಗೌರವ ಸ್ವೀಕರಿಸಿ, ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಿದರು. ನಂತರ ಅವರು ರಾಜ್ಯದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಉನ್ನತ ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಭಾಗವಹಿಸಿದ್ದರು.
ಗಣರಾಜ್ಯೋತ್ಸವದ ಹಿನ್ನೆಲೆ ಮಾಣೆಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಠಿಣ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು. ನಗರಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿತ್ತು. ಸಾರ್ವಜನಿಕರಿಗಾಗಿ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಇನ್ನೂ ಪರೇಡ್‌ನಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಒಳಗೊಂಡಂತೆ ಒಟ್ಟು 516 ಮಂದಿ ಭಾಗವಹಿಸಿದ್ದರು. ಭದ್ರತಾ ವ್ಯವಸ್ಥೆಯ ಭಾಗವಾಗಿ ಸುಮಾರು 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.



