ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೊಳಿಸಲು ಮುಂದಾಗಿರುವ ಹೊಸ ಪಾರ್ಕಿಂಗ್ ನಿಯಮಗಳ ಕುರಿತು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮನೆ ಮುಂದೆ ವಾಹನ ನಿಲುಗಡೆಗೆ ಶುಲ್ಕ ವಿಧಿಸದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು ನಗರದಲ್ಲಿ ರಸ್ತೆ ಬದಿ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತರಲು ಪ್ರಸ್ತಾವಿಸಲಾಗಿದೆ. ಇದರ ಭಾಗವಾಗಿ ವಾರ್ಷಿಕ ₹15 ಸಾವಿರದಿಂದ ₹25 ಸಾವಿರದವರೆಗೆ ಪಾರ್ಕಿಂಗ್ ಶುಲ್ಕ ವಿಧಿಸುವ ಪ್ರಸ್ತಾವನೆ ಕುರಿತು ಸಾರ್ವಜನಿಕರಿಂದ ವಿವಿಧ ಅಭಿಪ್ರಾಯಗಳು ಹಾಗೂ ಆತಂಕಗಳು ವ್ಯಕ್ತವಾಗುತ್ತಿವೆ.
ನಗರದಲ್ಲಿ ವಾಹನಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ಪಾರ್ಕಿಂಗ್ನಿಂದ ಉಂಟಾಗುತ್ತಿರುವ ಸಂಚಾರ ಸಮಸ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂಬುದನ್ನು ರಾಮಲಿಂಗಾರೆಡ್ಡಿ ಒಪ್ಪಿಕೊಂಡಿದ್ದಾರೆ. ಆದರೆ, ಪಾರ್ಕಿಂಗ್ ನಿಯಮ ರೂಪಿಸುವ ಸಂದರ್ಭದಲ್ಲಿ ಸಾಮಾನ್ಯ ನಾಗರಿಕರ ಆರ್ಥಿಕ ಪರಿಸ್ಥಿತಿಯನ್ನೂ ಪರಿಗಣಿಸುವುದು ಅತ್ಯಂತ ಮುಖ್ಯ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ವಿವಿಧ ಕಾರಣಗಳಿಂದ ಮಧ್ಯಮ ವರ್ಗ ಹಾಗೂ ಸಾಮಾನ್ಯ ಕುಟುಂಬಗಳು ಆರ್ಥಿಕ ಒತ್ತಡ ಎದುರಿಸುತ್ತಿವೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಜಿಎಸ್ಟಿ ಹಾಗೂ ಟೋಲ್ ಸೇರಿದಂತೆ ಹಲವು ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಾಹನ ಹೊಂದಿರುವ ಕುಟುಂಬಗಳ ಮೇಲೆ ಹೆಚ್ಚುವರಿಯಾಗಿ ಪಾರ್ಕಿಂಗ್ ಶುಲ್ಕ ವಿಧಿಸುವುದು ಮತ್ತಷ್ಟು ಆರ್ಥಿಕ ಹೊರೆಯಾಗಬಹುದು ಎಂದು ಸಚಿವರು ಹೇಳಿದ್ದಾರೆ.
ಕರ್ನಾಟಕ ಸರ್ಕಾರವು ಸಾಮಾನ್ಯ ಜನರ ಜೀವನಮಟ್ಟ ಸುಧಾರಿಸಲು ಹಾಗೂ ಆರ್ಥಿಕವಾಗಿ ನೆರವಾಗಲು ಹಲವು ಜನಪರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇಂತಹ ಸಂದರ್ಭದಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ ಕುಟುಂಬಗಳ ಮೇಲೆ ಮತ್ತೊಂದು ಅನಿವಾರ್ಯ ಆರ್ಥಿಕ ಹೊರ ಬೀಳದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ ದೊಡ್ಡ ನಿವೇಶನ ಅಥವಾ ಸ್ವಂತ ಮನೆ ಹೊಂದಿರುವ ಕೆಲವರು ತಮ್ಮ ವಾಹನಗಳನ್ನು ಮನೆಯ ಆವರಣದಲ್ಲೇ ನಿಲ್ಲಿಸಬಹುದು. ಆದರೆ, ಬಹುತೇಕ ಮಧ್ಯಮ ವರ್ಗದ ಕುಟುಂಬಗಳು ಸೀಮಿತ ಜಾಗದ ಮನೆಗಳು ಅಥವಾ ಅಪಾರ್ಟ್ಮೆಂಟ್ಗಳಲ್ಲಿ ವಾಸಿಸುತ್ತಿದ್ದು, ತಮ್ಮ ವಾಹನಗಳನ್ನು ಮನೆಯೊಳಗೆ ನಿಲ್ಲಿಸಲು ಅಗತ್ಯವಾದ ಸ್ಥಳದ ಕೊರತೆಯನ್ನು ಎದುರಿಸುತ್ತಿದ್ದಾರೆ.
ಹೊಸ ಕಟ್ಟಡ ನಿರ್ಮಾಣದ ನಿಯಮಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಸ್ವಾಗತಾರ್ಹ. ಆದರೆ, ಬೆಂಗಳೂರಿನ ಹಳೆಯ ಕಟ್ಟಡಗಳು ಹಾಗೂ ಹಳೆಯ ವಸತಿ ಪ್ರದೇಶಗಳಲ್ಲಿ ಇಂದಿನ ವಾಹನಗಳ ಸಂಖ್ಯೆಗೆ ಅನುಗುಣವಾಗಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು ಬಹುತೇಕ ಸಂದರ್ಭಗಳಲ್ಲಿ ಸಾಧ್ಯವಾಗುವುದಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಪಾರ್ಕಿಂಗ್ ಶುಲ್ಕದ ವಿಚಾರದಲ್ಲಿ ಆತುರದ ನಿರ್ಧಾರ ಕೈಗೊಳ್ಳದೆ, ಬೆಂಗಳೂರಿನ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ.



