ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಅವರನ್ನು ಅಗ್ನಿಶಾಮಕ ದಳದ ಎಡಿಜಿಪಿಯಾಗಿ ನೇಮಕ ಮಾಡಿ ನವೆಂಬರ್ 18ರಂದು ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಳಿಕ ಅಂದಿನ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ಬಳಿಕ ಬೆಂಗಳೂರು ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ 1996ರ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿತ್ತು.
ಸೀಮಂತ್ ಕುಮಾರ್ ಸಿಂಗ್ಗೆ ಹೊಸ ಜವಾಬ್ದಾರಿ
ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಇದೀಗ ವರ್ಗಾವಣೆ ಮಾಡಲಾಗಿದೆ. ಅವರಿಗೆ ಅಗ್ನಿಶಾಮಕ ದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ಜವಾಬ್ದಾರಿ ನೀಡಲಾಗಿದೆ.
ಆರ್. ಹಿತೇಂದ್ರ ನೂತನ ಪೊಲೀಸ್ ಕಮಿಷನರ್
ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಮೂಲಕ ಬೆಂಗಳೂರು ನಗರ ಪೊಲೀಸ್ ಇಲಾಖೆಯ ಮುಖ್ಯಸ್ಥರ ಜವಾಬ್ದಾರಿ ಈಗ ಆರ್. ಹಿತೇಂದ್ರ ಅವರ ಹೆಗಲೇರಿದೆ.










