HomeBengaluru Newsಬೆಂಗಳೂರು ಇನ್ನು ಐವರು ಪೊಲೀಸ್ ಕಮಿಷನರೇಟ್‌ಗಳಡಿ: ಸ್ವಾತಂತ್ರ್ಯೋತ್ಸವದ ವೇದಿಕೆಯಲ್ಲಿ ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು ಇನ್ನು ಐವರು ಪೊಲೀಸ್ ಕಮಿಷನರೇಟ್‌ಗಳಡಿ: ಸ್ವಾತಂತ್ರ್ಯೋತ್ಸವದ ವೇದಿಕೆಯಲ್ಲಿ ಡಿಕೆಶಿ ಮಹತ್ವದ ಘೋಷಣೆ

For Dai;y Updates Join Our whatsapp Group

ಬೆಂಗಳೂರು: ಬೆಂಗಳೂರಿನ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಾಣೆಕ್‌ ಶಾ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದರು.

ಬೆಂಗಳೂರಿಗೆ ಪ್ರತ್ಯೇಕವಾಗಿ ಐದು ಪೊಲೀಸ್ ಕಮಿಷನರೇಟ್‌ಗಳನ್ನು ರಚಿಸುವುದಾಗಿ ಡಿ.ಕೆ. ಶಿವಕುಮಾರ್ ಘೋಷಿಸಿದರು. 10 ಲಕ್ಷ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡಿದ್ದ ಪ್ರಸ್ತುತ ಕಮಿಷನರೇಟ್ ವ್ಯವಸ್ಥೆಯನ್ನು ವಿಂಗಡಿಸಿ, ಅಗತ್ಯವಿರುವ ಪ್ರದೇಶಗಳಲ್ಲಿ ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಮೂಲಕ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ನಗರದ ಹೆಚ್ಚುತ್ತಿರುವ ಸಂಚಾರ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲು ಜಿಬಿಎ ಹಾಗೂ ಟ್ರಾಫಿಕ್ ಪೊಲೀಸ್ ವಿಭಾಗದ ಮೂಲಕ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.

ಮಹಿಳೆಯರು ಹಾಗೂ ಬಾಲಕಿಯರು ಭಯವಿಲ್ಲದೆ ಬೆಂಗಳೂರಿನಲ್ಲಿ ಸಂಚರಿಸುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ಬೆಂಗಳೂರಿಗೆ ಪ್ರತ್ಯೇಕ ಆ್ಯಂಟಿ ರೌಡಿ ಸ್ಕ್ವಾಡ್ ರಚಿಸಲಾಗುವುದು ಎಂದು ಸಿಎಂ ಘೋಷಿಸಿದರು.

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ₹1.50 ಲಕ್ಷ ಕೋಟಿ ವೆಚ್ಚದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ₹26 ಸಾವಿರ ಕೋಟಿ ವೆಚ್ಚದಲ್ಲಿ 117 ಕಿ.ಮೀ ಉದ್ದದ ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’ ನಿರ್ಮಾಣ, ಲಾಲ್‌ಬಾಗ್ ಮಾದರಿಯ ಐದು ಬೃಹತ್ ಟ್ರೀ ಪಾರ್ಕ್‌ಗಳ ನಿರ್ಮಾಣ ಹಾಗೂ ಏಳು ಕೆರೆಗಳ ಪುನಶ್ಚೇತನಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರದಲ್ಲಿ ₹20 ಸಾವಿರ ಕೋಟಿ ವೆಚ್ಚದ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್, ‘ಬಿಯಾಂಡ್ ಬೆಂಗಳೂರು’ ಯೋಜನೆಯಡಿ ಐದು ಜಿಲ್ಲೆಗಳಲ್ಲಿ ಗ್ಲೋಬಲ್ ಟೆಕ್ ಸೆಂಟರ್‌ಗಳು ಹಾಗೂ ‘ಕರ್ನಾಟಕ ರಾಜ್ಯ ಮೋಟಾರು ವಾಹನ ವಿಮಾ ಸಂಸ್ಥೆ’ ಸ್ಥಾಪಿಸುವ ಯೋಜನೆಯನ್ನೂ ಪ್ರಕಟಿಸಿದರು.

ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಘೋಷಣೆ ಮಾಡಿರುವ ಸಿಎಂ, ಮುಂದಿನ ಆರು ತಿಂಗಳಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು. ಖಾಸಗಿ ಉದ್ಯೋಗಾವಕಾಶಗಳಿಗೆ ‘ಯುವ ಉದ್ಯೋಗ ಸೇತು’ ಯೋಜನೆ ಹಾಗೂ ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗಗಳಿಗೆ ಮಾಸಿಕ ₹2,500 ಪ್ರೋತ್ಸಾಹಧನ ನೀಡುವ ‘ಉದ್ಯೋಗ ನಿಧಿ’ ಯೋಜನೆಯನ್ನು ಘೋಷಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಆರನೇ ತರಗತಿಯಿಂದಲೇ AI ಶಿಕ್ಷಣ ಪರಿಚಯಿಸುವುದು, ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪಿಸುವುದು, ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5 ವಿಶೇಷ ಮೀಸಲಾತಿ ಹಾಗೂ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆ ಸೇರಿದಂತೆ ಹಲವು ಕ್ರಮಗಳನ್ನು ಘೋಷಿಸಿದರು.

ರೈತರಿಗಾಗಿ ಡ್ರೋನ್ ಆಧಾರಿತ ಬೆಳೆ ಸಮೀಕ್ಷೆಯ ‘ಮುಖ್ಯಮಂತ್ರಿ ರೈತ ಚೈತನ್ಯ’ ಹಾಗೂ ಸಣ್ಣ ರೈತರಿಗೆ ಯಂತ್ರೋಪಕರಣಗಳನ್ನು ಬಾಡಿಗೆಗೆ ಪಡೆಯಲು ಶೇ.50 ಸಬ್ಸಿಡಿ ನೀಡುವ ‘ರೈತ ಮಿತ್ರ’ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಯ ಮೊದಲ ಹಂತ ಸೇರಿದಂತೆ ₹16 ಸಾವಿರ ಕೋಟಿ ಮೊತ್ತದ ಜಲಸಂಪನ್ಮೂಲ ಯೋಜನೆಗಳು ಪ್ರಗತಿಯಲ್ಲಿವೆ. ಎಸ್‌ಸಿ, ಎಸ್‌ಟಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕೂ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img