ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಗ್ರಾಮದ ಉದ್ಯಮಿ ವೀರಣ್ಣ ಹಾಲಪ್ಪ ಪವಾಡದ ಅವರು 2026–27ನೇ ಸಾಲಿನ ಶ್ರೇಷ್ಠ ಉದ್ಯಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಆ.14ರಿಂದ 18ರವರೆಗೆ ಗದಗ ಎಪಿಎಂಸಿ ಯಾರ್ಡ್‌ನ ಶ್ರೀ ಸ್ವಾಮಿ ವಿವೇಕಾನಂದ ಸಭಾಭವನ ಹಾಗೂ ಕೆ.ಎಚ್. ಪಾಟೀಲ ಸಭಾಭವನದಲ್ಲಿ ನಡೆಯಲಿರುವ ‘ಗದಗ ಉತ್ಸವ–2026’ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಶಿಗ್ಲಿ ಗ್ರಾಮದ ಶ್ರೀಮದ್ ರಂಭಾಪುರಿ ಟೆಕ್ಸ್‌ಟೈಲ್ಸ್ ಮಾಲೀಕರಾಗಿರುವ ವೀರಣ್ಣ ಹಾಲಪ್ಪ ಪವಾಡದ ಅವರು ಕೈಮಗ್ಗದ ಸೀರೆ ಉದ್ಯಮದಲ್ಲಿ ಕಳೆದ ಮೂರು ದಶಕಗಳಿಂದ ವಿಶೇಷ ಸಾಧನೆ ಮಾಡಿದ್ದಾರೆ. ಅವರ ಉದ್ಯಮ ಕ್ಷೇತ್ರದ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಶ್ರೇಷ್ಠ ಉದ್ಯಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಗದಗದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಗಣ್ಯರು, ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳಿಂದ ವೀರಣ್ಣ ಪವಾಡದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ವೀರಣ್ಣ ಪವಾಡದ ಅವರಿಗೆ ಶ್ರೇಷ್ಠ ಉದ್ಯಮಿ ಪ್ರಶಸ್ತಿ ಲಭಿಸಿರುವುದಕ್ಕೆ ಶಿಗ್ಲಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.



