ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ 42ನೇ ಎಸಿಜೆಎಂ ನ್ಯಾಯಾಲಯ ಮಹತ್ವದ ನಿರ್ದೇಶನ ನೀಡಿದೆ.
ಹೃದಯ ಸಂಬಂಧಿ ಸಮಸ್ಯೆ ಇರುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಅವರನ್ನು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಯಲ್ಲಿ ಹಿರಿಯ ವೈದ್ಯರ ಸಮ್ಮುಖದಲ್ಲಿ ಸಂಪೂರ್ಣ ತಪಾಸಣೆಗೆ ಒಳಪಡಿಸಲು ಸಿಐಡಿಗೆ ಆದೇಶಿಸಲಾಗಿದೆ.
ಇಂದು ಅವರನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಯಲ್ಲಿ ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಹೃದಯ ಸಮಸ್ಯೆಯ ಲಕ್ಷಣಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.
ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಅವರಿಗೆ ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದ್ದು, ಸಿಐಡಿ ಸುಪರ್ದಿಯಲ್ಲೇ ಮೆಡಿಕಲ್ ಟೆಸ್ಟ್ ನಡೆಸಬೇಕು ಎಂದು ತಿಳಿಸಿದೆ. ನಾಳೆ ವೈದ್ಯಕೀಯ ವರದಿಯೊಂದಿಗೆ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲು ಸೂಚನೆ ನೀಡಲಾಗಿದೆ.
ಬೌರಿಂಗ್ ಮತ್ತು ಜಯದೇವ ಆಸ್ಪತ್ರೆಗಳ ವರದಿಗಳ ಆಧಾರದ ಮೇಲೆ ಆರೋಪಿಯನ್ನು ಜೈಲು ಶಿಕ್ಷೆಗೆ ಕಳುಹಿಸಲಾಗುವುದೇ ಅಥವಾ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಕಸ್ಟಡಿಗೆ ನೀಡಲಾಗುವುದೇ ಎಂಬುದು ತೀರ್ಮಾನವಾಗಲಿದೆ.



