ನವದೆಹಲಿ: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ನಿರ್ದೇಶನಗಳನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಪ್ರಕರಣವನ್ನು ಮರುಪರಿಶೀಲನೆಗಾಗಿ ಅಲಹಾಬಾದ್ ಹೈಕೋರ್ಟ್ಗೆ ಮರಳಿಸಿರುವ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಹೊಸದಾಗಿ ನಡೆಸುವಂತೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.
ಬಿಜೆಪಿ ಕಾರ್ಯಕರ್ತ ಸಲ್ಲಿಸಿದ್ದ ಅರ್ಜಿ
ಕರ್ನಾಟಕ ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಗ್ನೇಶ್ ಶಿಶಿರ್ ಅವರು ರಾಹುಲ್ ಗಾಂಧಿ ವಿರುದ್ಧ ಅರ್ಜಿ ಸಲ್ಲಿಸಿದ್ದರು. ತಮ್ಮ ಆದಾಯದ ಮೂಲಗಳಿಗೆ ಹೋಲಿಸಿದರೆ ರಾಹುಲ್ ಗಾಂಧಿ ಅಕ್ರಮವಾಗಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬುದು ಅವರ ಆರೋಪವಾಗಿತ್ತು. ಈ ಕುರಿತು ತನಿಖೆ ನಡೆಸುವಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಬೇಕೆಂದು ಅವರು ನ್ಯಾಯಾಲಯವನ್ನು ಕೋರಿದ್ದರು.
ಹೈಕೋರ್ಟ್ ನೀಡಿದ್ದ ನಿರ್ದೇಶನವೇನು?
ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್, ಆರೋಪಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸುವಂತೆ ಸಿಬಿಐ ಮತ್ತು ಇ.ಡಿ.ಗೆ ಸೂಚಿಸಿತ್ತು. ಅಲ್ಲದೆ, ತನಿಖೆಯ ಪ್ರಗತಿ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆಯೂ ನಿರ್ದೇಶಿಸಿತ್ತು. ಬಳಿಕ ಸಿಬಿಐ ಸಲ್ಲಿಸಿದ್ದ ಅಫಿಡವಿಟ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್, ತನಿಖೆಯ ಪ್ರಗತಿ ಕುರಿತು ಹೊಸ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿತ್ತು.
ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ರಾಹುಲ್ ಗಾಂಧಿ
ಅಲಹಾಬಾದ್ ಹೈಕೋರ್ಟ್ನ ಈ ನಿರ್ದೇಶನಗಳನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 17ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಹೈಕೋರ್ಟ್ನ ವಿಚಾರಣೆಗೆ ತಡೆ ನೀಡಿತ್ತು. ಅಲ್ಲದೆ, ಹಿಂದಿನ ನಿರ್ದೇಶನದಂತೆ ಯಾವುದೇ ವರದಿ ಸಲ್ಲಿಸದಂತೆ ಸಿಬಿಐ ಮತ್ತು ಇ.ಡಿಗೆ ಸೂಚಿಸಿತ್ತು.
ಹೊಸ ವಿಚಾರಣೆಗೆ ಸುಪ್ರೀಂಕೋರ್ಟ್ ಸೂಚನೆ
ಇದೀಗ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಹಿಂದಿನ ನಿರ್ದೇಶನಗಳನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ಪ್ರಕರಣವನ್ನು ಮತ್ತೆ ಅದೇ ಹೈಕೋರ್ಟ್ಗೆ ಕಳುಹಿಸಿದೆ. ಅರ್ಜಿಯ ವಿಚಾರಣೆಯನ್ನು ಹೊಸದಾಗಿ ನಡೆಸಬೇಕು ಎಂದು ಸೂಚಿಸಿದೆ. ಮುಖ್ಯವಾಗಿ, ರಾಹುಲ್ ಗಾಂಧಿ ಅವರನ್ನೂ ಪ್ರಕರಣದಲ್ಲಿ ಪಕ್ಷಕಾರರನ್ನಾಗಿ ಸೇರಿಸಿಕೊಳ್ಳಬೇಕು. ಅವರ ವಾದವನ್ನು ಆಲಿಸಿದ ಬಳಿಕವೇ ಮುಂದಿನ ಆದೇಶ ನೀಡಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.







