ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಹೈಕೋರ್ಟ್ ಪೀಠ ಈ ತೀರ್ಪು ನೀಡಿದೆ.
ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರದಲ್ಲಿ ದೋಷವಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದರೆಂಬ ಆರೋಪವನ್ನು ಪರಿಗಣಿಸಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಲಾಗಿದೆ. ಆದೇಶವನ್ನು ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೆ ಕಳುಹಿಸಲಾಗಿದೆ.
ಆದರೆ ಎದುರಾಳಿ ಅಭ್ಯರ್ಥಿ ಸಿ. ಮುನಿರಾಜು ಅವರನ್ನು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ. ಮೇಲ್ಮನವಿ ಸಲ್ಲಿಸುವವರೆಗೆ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಸುಬ್ಬಾರೆಡ್ಡಿ ಪರ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್ ಮನವಿ ಸಲ್ಲಿಸಿದ್ದರು.
ಇದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ಆಕ್ಷೇಪ ವ್ಯಕ್ತಪಡಿಸಿದರು. ಅಂತಿಮವಾಗಿ ಕೋರ್ಟ್ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಲಭಿಸಿದೆ.
ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರೋದು ಸುಬ್ಬಾರೆಡ್ಡಿಗೆ ಉಳಿದ ಪ್ರಮುಖ ಮಾರ್ಗವಾಗಿದೆ. ಮುಂದಿನ ಆರು ತಿಂಗಳೊಳಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡದಿದ್ದರೆ ಬಾಗೇಪಲ್ಲಿ ಕ್ಷೇತ್ರಕ್ಕೆ ಮರುಚುನಾವಣೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಸುಪ್ರೀಂ ಕೋರ್ಟ್ ಯಾವ ತೀರ್ಪು ನೀಡುತ್ತದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.



