2025ರಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ಪ್ಲೇ ಆಫ್ ಟಿಕೆಟ್ ಬಹುತೇಕ ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಪ್ರಮುಖ ಬ್ಯಾಟರ್ ದೇವದತ್ ಪಡಿಕ್ಕಲ್ ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಯಾಗಿ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಆರ್ಸಿಬಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದೆ.
ಪ್ಲೇ ಆಫ್ ಸನಿಹವಾಗುತ್ತಿರುವಾಗ ಆರ್ಸಿಬಿಗೆ ಆಟಗಾರರ ಇಂಜುರಿ ಸಮಸ್ಯೆ ಬೆಂಬಿಡದಂತೆ ಕಾಡುತ್ತಿದೆ. ಈ ಮೊದಲು ಆರಂಭಿಕ ಆಟಗಾರ ಫಿಲ್ ಸಾಲ್ಟ್ ಜ್ವರದಿಂದಾಗಿ ಪಂದ್ಯದಿಂದ ಹೊರಗುಳಿದಿದ್ದಾರೆ. ಪ್ರಮುಖ ವೇಗಿ ಜೋಶ್ ಹೇಜಲ್ವುಡ್ ಕೂಡ ಗಾಯಕ್ಕೆ ತುತ್ತಾಗಿದ್ದು, ಅವರು ಕೂಡ ಕಳೆದ ಪಂದ್ಯದಲ್ಲಿ ಆಡಿರಲಿಲ್ಲ. ಇದರ ಜೊತೆಗೆ ನಾಯಕ ರಜತ್ ಪಾಟಿದರ್ ಕೂಡ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಇದರ ಜೊತೆಗೆ ಇದೀಗ ತಂಡದ ಪ್ರಮುಖ ಬ್ಯಾಟರ್ ದೇವದತ್ ಪಡಿಕ್ಕಲ್ ಇಂಜುರಿಯಿಂದಾಗಿ ಇಡೀ ಟೂರ್ನಿಯಿಂದ ಹೊರಬಿದ್ದಿರುವುದು ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಪಡಿಕ್ಕಲ್ ಮಂಡಿರಜ್ಜು ಗಾಯದಿಂದಾಗಿ ಬಳಲುತ್ತಿರುವ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.