ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸ್ಟಡಿ ಹಾಲಿಡೇ ವ್ಯವಸ್ಥೆಯನ್ನು ರದ್ದುಪಡಿಸಿ ಹೊಸ ಮಾರ್ಗಸೂಚಿ ಜಾರಿಗೊಳಿಸಿದೆ.
ಪಿಯು ಫಲಿತಾಂಶದಲ್ಲಿ ನಿರೀಕ್ಷಿತ ಸುಧಾರಣೆ ಕಂಡುಬರದ ಹಿನ್ನೆಲೆ, ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ. ಫೆಬ್ರವರಿ 26ರವರೆಗೆ ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಉಪನ್ಯಾಸಕರ ನೇತೃತ್ವದಲ್ಲಿ ಗ್ರೂಪ್ ಸ್ಟಡಿ, ಪಠ್ಯ ಪುನರವಲೋಕನ, ಅನುಮಾನ ನಿವಾರಣೆ ಹಾಗೂ ಪ್ರಶ್ನೋತ್ತರ ಚರ್ಚೆಗಳ ಮೂಲಕ ವಿದ್ಯಾರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಸಿದ್ಧಪಡಿಸಲು ಕಾಲೇಜುಗಳಿಗೆ ನಿರ್ದೇಶನ ನೀಡಲಾಗಿದೆ.
ಜೊತೆಗೆ ಉಪನ್ಯಾಸಕರು ಕೂಡ ಪರೀಕ್ಷೆ ಮುಗಿಯುವವರೆಗೂ ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು ಎಂದು ಇಲಾಖೆ ಆದೇಶಿಸಿದೆ. ಈ ಕ್ರಮದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಾಗಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಾಣಲಿದೆ ಎಂಬ ವಿಶ್ವಾಸವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯಕ್ತಪಡಿಸಿದೆ.



