ಬೆಂಗಳೂರು: ಬೆಂಗಳೂರು ಮೂಲದ ನವವಿವಾಹಿತೆ ಗಾನವಿ (26) ಆತ್ಮಹತ್ಯೆ ಪ್ರಕರಣದಲ್ಲಿ ಇದೀಗ ಮಹತ್ವದ ತಿರುವು ಕಂಡುಬಂದಿದೆ. ಎರಡು ತಿಂಗಳ ಹಿಂದಷ್ಟೇ ಸೂರಜ್ ನನ್ನು ವಿವಾಹವಾಗಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಗಾನವಿಯ ಆತ್ಮಹತ್ಯೆಯ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದು, ಆತನ ತಾಯಿ ಜಯಂತಿ ಆತ್ಮಹತ್ಯೆಗೆ ಯತ್ನಿಸಿರುವುದು ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ.
ಗಂಡನೊಂದಿಗೆ ಉಂಟಾದ ಮನಸ್ತಾಪದ ಹಿನ್ನೆಲೆಯಲ್ಲಿ ಗಾನವಿ ಪೋಷಕರ ಮನೆಗೆ ಮರಳಿದ್ದರು. ಈ ವೇಳೆ ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಬ್ರೈನ್ ಡೆಡ್ ಆಗಿದ್ದ ಕಾರಣ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಇದರ ನಡುವೆ, ಗಾನವಿಯ ಸಾವಿನ ಬಳಿಕ ಸೂರಜ್ ತಾಯಿ ಜಯಂತಿ ಹಾಗೂ ಸಹೋದರ ಸಂಜಯ್ ಅವರೊಂದಿಗೆ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದರು. ಇದೀಗ ಸೂರಜ್ ಮಹಾರಾಷ್ಟ್ರದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅಚ್ಚರಿಯನ್ನುಂಟುಮಾಡಿದೆ. ಪತ್ನಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗಾನವಿಯ ಪೋಷಕರು ಹಾಗೂ ಸಂಬಂಧಿಕರಿಂದ ಎದುರಾದ ಆಕ್ರೋಶ ಮತ್ತು ಅವಮಾನವನ್ನು ತಾಳಲಾರದೆ ತಾಯಿ–ಮಗ ಈ ತೀವ್ರ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಾಹಿತಿಯಂತೆ, ಸೂರಜ್ ಮತ್ತು ಗಾನವಿ ವಿವಾಹದ ನಂತರ ಹನಿಮೂನ್ಗಾಗಿ ಶ್ರೀಲಂಕಾಗೆ ತೆರಳಿದ್ದರು. ಆದರೆ ಅಲ್ಲಿಯೇ ದಂಪತಿಯ ನಡುವೆ ಕಲಹಗಳು ಉಂಟಾಗಿದ್ದು, ಗಾನವಿಯ ವಿವಾಹಪೂರ್ವ ಸಂಬಂಧದ ವಿಚಾರದಿಂದ ದಾಂಪತ್ಯದಲ್ಲಿ ಬಿರುಕು ಮೂಡಿತ್ತು ಎನ್ನಲಾಗಿದೆ.
ಈ ಕಾರಣಗಳಿಂದ ಹನಿಮೂನ್ನ್ನು ಮಧ್ಯದಲ್ಲೇ ಮೊಟಕುಗೊಳಿಸಿ ಗಾನವಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಶ್ರೀಲಂಕಾದಿಂದ ಹಿಂದಿರುಗಿದ ಬಳಿಕವೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.



