ಬೆಂಗಳೂರು: ನಾಳೆ (ಫೆ.1) ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕಾರ್ಯಾಲಯಗಳಲ್ಲಿ ಬಜೆಟ್ ನೇರ ವೀಕ್ಷಣೆಗೆ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುವ ಬಜೆಟ್ ವೀಕ್ಷಣಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ರಾಜ್ಯ ಕೋರ್ ಕಮಿಟಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಶಿವಮೊಗ್ಗದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಕಾರ್ಯಕರ್ತರೊಂದಿಗೆ ಬಜೆಟ್ ವೀಕ್ಷಣೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.



