ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತ ಸಂಪೂರ್ಣ ತನಿಖೆಯನ್ನು ಕೂಡಲೇ ಎನ್‍ಐಎಗೆ ಕೊಡಿ ಎಂದು ಕೋಟ್ಯಂತರ ಸದ್ಭಕ್ತರು, ಹಿಂದೂಗಳ ಪರವಾಗಿ ಮುಖ್ಯಮಂತ್ರಿಗಳನ್ನು ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಮಾತನಾಡಿದ ಅವರು, ಎನ್‍ಐಎ ತನಿಖೆ ಮಾಡಿದರೆ ರಾಜ್ಯ ಸರಕಾರದ ಬಗ್ಗೆ ಜನರಿಗೆ ಮತ್ತು ಅಪಾರ ಭಕ್ತರಿಗೆ ವಿಶ್ವಾಸ ಬರಲಿದೆ. ಆದ್ದರಿಂದ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳು ಈ ನಿರ್ಧಾರವನ್ನು ತಕ್ಷಣ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದೇ ಆಗ್ರಹ ಮುಂದಿಟ್ಟು ಸೆ. 1ರಂದು ಸೋಮವಾರ ಧರ್ಮಸ್ಥಳ ಚಲೋಗೆ ಕರೆ ನೀಡುತ್ತಿರುವುದಾಗಿ ಪ್ರಕಟಿಸಿದರು.
ಹಿಂದೂ ಭಾವನೆಗೆ ಧಕ್ಕೆ ತಂದ ಸರಕಾರದ ಕಿವಿ ಹಿಂಡುವ ಕೆಲಸ ಆಗಬೇಕಿದೆ. ಎನ್‍ಐಎ ತನಿಖೆಯ ಆಗ್ರಹದ ಬೇಡಿಕೆ ಮುಂದಿಟ್ಟು ರಾಜ್ಯದ ಸಮಸ್ತ ಹಿಂದೂ ಸಮಾಜವು ಇದರಲ್ಲಿ ಪಾಲ್ಗೊಳ್ಳಬೇಕು. ಸೆ. 1ರಂದು ಬೃಹತ್ ಸಮಾವೇಶ ಮಾಡಲಿದ್ದೇವೆ ಎಂದು ತಿಳಿಸಿದರು. ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ, ಎಲ್ಲ ಜಿಲ್ಲೆಗಳಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಧರ್ಮಸ್ಥಳಕ್ಕೆ ಬರಲಿದ್ದಾರೆ. ಲಕ್ಷಾಂತರ ಜನರು ಭಾಗವಹಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಧರ್ಮಸ್ಥಳಕ್ಕೆ ಹೊರಡುವ ದಿನ ಹಿಂದೂ ಸಮಾಜದವರು ತಮ್ಮ ನಗರ, ಗ್ರಾಮಗಳಲ್ಲಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಸ್ಥಳೀಯವಾಗಿ ಮೆರವಣಿಗೆ ಮಾಡಿ ಆಗಮಿಸಬೇಕಿದೆ. ಅಂದು ಮಧ್ಯಾಹ್ನ 2 ಗಂಟೆಗೆ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಮೂಡಿಸುವ ಮತ್ತು ಸರಕಾರಕ್ಕೆ ಎಚ್ಚರಿಕೆ ನೀಡುವ ಬೃಹತ್ ಸಮಾವೇಶ ನಡೆಯುತ್ತದೆ ಎಂದು ಹೇಳಿದರು.