ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಸಿಟಿ ರವಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಆಧಾರದಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ಪೊಲೀಸರು ಬಂಧಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು. ಇದು ಮಾನವ ಹಕ್ಕುಗಳ ಉಲ್ಲಂಘನೆ ಮಾತ್ರವಲ್ಲ, ಗಂಭೀರ ಮಹಿಳಾ ದೌರ್ಜನ್ಯವಾಗಿದೆ ಎಂದು ಕಿಡಿಕಾರಿದರು.
ರಾಜಕೀಯ ಪ್ರಭಾವ ಬಳಸಿ ಈ ಕೃತ್ಯ ನಡೆಸಲಾಗಿದೆ. ಮಾನವೀಯ ಜಗತ್ತು ತಲೆತಗ್ಗಿಸುವಂತಹ ವರ್ತನೆ ಇದಾಗಿದೆ ಎಂದು ಅವರು ಹೇಳಿದರು. ಮಹಿಳಾ ಆಯೋಗವು ಸುಮೋಟೋ ಪ್ರಕರಣ ದಾಖಲಿಸಿಕೊಂಡು ಈ ಘಟನೆಯ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಸುಳ್ಳು ದೂರು ನೀಡಿರುವ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರ ಈ ಕೃತ್ಯಕ್ಕೆ ಯಾವುದೇ ಪ್ರಾಯಶ್ಚಿತ್ತವಿಲ್ಲ. ಪೊಲೀಸರು ಕಾಂಗ್ರೆಸ್ ಕಾರ್ಪೊರೇಟರ್ ಅಡಿಯಾಳಿನಂತೆ ಕೆಲಸ ಮಾಡಿದ್ದಾರೆ ಎಂದು ಸಿಟಿ ರವಿ ಗಂಭೀರ ಆರೋಪ ಮಾಡಿದರು.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.



