ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಜರುಗಿದೆ.
ಮೃತರನ್ನು ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಎಂದು ಗುರುತಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಲೆಯಾದವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ನಿರಾಳೆ ಹಾಗೂ ಗೊಳಗಿ ಎಂಬ ಕುಟುಂಬದ ಮಧ್ಯೆ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಿತ್ತು. ಕಳೆದ ಕೆಲ ದಿನಗಳ ಹಿಂದೆ ಎರಡೂ ಕುಟುಂಬಗಳ ಮಧ್ಯೆ ನ್ಯಾಯ ಪಂಚಾಯಿತಿ ಆಗಿತ್ತು. ಇಂದು ಅದೇ ಜಮೀನಿನ ವಿಚಾರದಲ್ಲಿ ನ್ಯಾಯ ಪಂಚಾಯಿತಿಗೆ ಹೋಗಿದ್ದ ವೇಳೆ 15-20 ಜನರನ್ನು ಒಳಗೊಂಡ ದುರ್ಷರ್ಮಿಗಳ ಗುಂಪೊಂದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ಏಕಾಏಕಿ ದಾಳಿ ನಡೆಸಿ, ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಚಡಚಣ ಪಟ್ಟಣದ ನಿರಾಳೆ ಕುಟುಂಬದವರು ಗೋವಿಂದಪುರ ಗ್ರಾಮದ ವ್ಯಕ್ತಿಯೊಬ್ಬರಿಗೆ ಸೇರಿದ 25 ಎಕರೆ ವಿವಾದಿತ ಜಮೀನನ್ನು ಆರು ತಿಂಗಳ ಹಿಂದೆ ಖರೀದಿ ಮಾಡಲು ಮುಂದಾಗಿತ್ತು. ಈ ವೇಳೆ ಗ್ರಾಮಸ್ಥರು ವಿವಾದಿತ ಜಮೀನು ಖರೀದಿಸದಂತೆ ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ವಿರೋಧದ ನಡುವೆಯೂ ನಿರಾಳೆ ಕುಟುಂಬದವರು ಜಮೀನು ಖರೀದಿ ಮಾಡಿದ್ದರು. ಅಲ್ಲದೇ, ಇದೀಗ ಟ್ರ್ಯಾಕ್ಟರ್, ಜೆಸಿಬಿ ಮೂಲಕ ಹೊಲವನ್ನು ಸ್ವಚ್ಛಗೊಳಿಸಿ, ಕೃಷಿಗೆ ಸಜ್ಜುಗೊಳಿಸುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ, ಮಾರಣಹೋಮ ನಡೆಸಿರುವುದಾಗಿ ಪ್ರಾಥಮಿಕ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿ ಆಗಿದ್ದರೂ ದೇಹದಲ್ಲಿ ಯಾವುದೇ ಗಾಯಗಳು ಕಂಡುಬಂದಿಲ್ಲ. ಹೀಗಾಗಿ ಮರಣೋತ್ತರ ಪರೀಕ್ಷೆ ಬಳಿಕ ಖಚಿತ ಮಾಹಿತಿ ಸಿಗಲಿದ್ದು, ಪೋಲೀಸರು ಇದುವರೆಗೂ ಎಫ್ಐಆರ್ ದಾಖಲಿಸಿಲ್ಲ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಪೋಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.



