ಬೆಂಗಳೂರು: ನಗರದ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೂಪೇಶ್ ಎಂಬಾತ ಕೊಲೆಯಾದ ಯುವಕನಾಗಿದ್ದು, ಆತನೊಂದಿಗೆ ಒಂದೇ ಮನೆಯಲ್ಲಿ ವಾಸವಿದ್ದ ರೂಮ್ಮೇಟ್ ಮೇಲೆಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರೂಪೇಶ್ನ ತಲೆಗೆ ಕಲ್ಲಿನಿಂದ ಬಲವಾಗಿ ಹೊಡೆದು ಹತ್ಯೆ ಮಾಡಿರುವ ಶಂಕೆ ಇದೆ. ಕೃತ್ಯದ ಬಳಿಕ ಮನೆಯ ಬಾಗಿಲಿಗೆ ಬೀಗ ಹಾಕಿಕೊಂಡು ರೂಮ್ಮೇಟ್ ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸುಮಾರು ಐದಾರು ದಿನಗಳ ಹಿಂದೆಯೇ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇಂದು ಮನೆಯಿಂದ ದುರ್ವಾಸನೆ ಹರಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ನಂದಿನಿ ಲೇಔಟ್ ಪೊಲೀಸರು ಮನೆಯ ಪರಿಶೀಲನೆ ನಡೆಸಿದಾಗ ಯುವಕನ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.
ಮೃತ ರೂಪೇಶ್ ಉತ್ತರ ಭಾರತ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಆತನೊಂದಿಗೆ ವಾಸವಿದ್ದ ರೂಮ್ಮೇಟ್ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕೊಲೆಯ ಹಿಂದಿನ ಕಾರಣವೇನು ಮತ್ತು ಕೃತ್ಯದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ.









