ಬೆಂಗಳೂರು: ನಗರದ ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕಾರಿನ ಮುಂಭಾಗದ ಸೀಟಿನಲ್ಲಿ ಶವ ಪತ್ತೆಯಾಗಿದ್ದು, ಘಟನಾ ಸ್ಥಳದಲ್ಲಿ ಬುಲೆಟ್ ಕೂಡ ಸಿಕ್ಕಿದೆ. ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ನಿನ್ನೆ ರಾತ್ರಿ ವ್ಯಕ್ತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಇದು ಆತ್ಮಹತ್ಯೆಯೋ ಅಥವಾ ಯಾರಾದರೂ ಕೊಲೆ ಮಾಡಿ ಶವವನ್ನು ಕಾರಿನಲ್ಲಿ ಬಿಟ್ಟು ಹೋಗಿದ್ದಾರೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಸ್ಥಳಕ್ಕೆ ಪೊಲೀಸರ ಭೇಟಿ, ತನಿಖೆ ಚುರುಕು
ಮೃತದೇಹ ಪತ್ತೆಯಾದ ಮಾಹಿತಿ ತಿಳಿಯುತ್ತಿದ್ದಂತೆ ಬಾಗಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನಾ ಸ್ಥಳದಲ್ಲಿ ದೊರೆತಿರುವ ಬುಲೆಟ್ ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ. ಮರಣದ ಹಿಂದಿನ ನಿಖರ ಕಾರಣ ಹಾಗೂ ವ್ಯಕ್ತಿಯ ಗುರುತು ಪತ್ತೆಯಾದ ಬಳಿಕ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರುವ ನಿರೀಕ್ಷೆಯಿದೆ.









