ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಪ್ರಕರಣ ಬೆಳಕಿಗೆ ಬಂದಿದೆ. ಹಲಸೂರು ಪ್ರದೇಶದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿರುವುದು ಪತ್ತೆಯಾಗಿದೆ.
ಜನವರಿ 30ರಂದು ಈ ಬೆದರಿಕೆ ಇ-ಮೇಲ್ ಬಂದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಇ-ಮೇಲ್‌ನಲ್ಲಿ 5 ಆರ್ಡಿಎಕ್ಸ್ ಬಾಂಬ್ ಸ್ಫೋಟ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಇಟಾಲಿಯನ್ ಕಾನ್ಸುಲೇಟಿನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಅವರು ಹಲಸೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಹಲಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ರಾಯಭಾರಿ ಕಚೇರಿಯ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಇ-ಮೇಲ್ ಕಳುಹಿಸಿದವರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.



