ಬೆಂಗಳೂರು: ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದ್ದು, ಇಬ್ಬರು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ.
ಸಹಾಯಕ ಕಾರ್ಯನಿರ್ವಹಕ ಅಭಿಯಂತರ ಆರ್.ಟಿ. ರುದ್ರಮುನಿ ಹಾಗೂ ಕಾರ್ಯನಿರ್ವಹಕ ಅಭಿಯಂತರ ಮೊಹಮದ್ ಜಾವೇದ್ ಅವರನ್ನು ಅಮಾನತು ಮಾಡಿ ಜಿಬಿಎ ಉಪ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಸಂಪೂರ್ಣ ತನಿಖೆ ನಡೆಸಲು ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, 7 ದಿನಗಳೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ತನಿಖಾ ಸಮಿತಿಯಲ್ಲಿ ತಹಸೀಲ್ದಾರ್ ಸೇರಿದಂತೆ ಪಿಡಬ್ಲ್ಯುಡಿ ನಿವೃತ್ತ ಮುಖ್ಯ ಇಂಜಿನಿಯರ್ ಸೇರಿ ಒಟ್ಟು 6 ಮಂದಿ ಸದಸ್ಯರಿದ್ದಾರೆ.
ಇನ್ನೊಂದೆಡೆ, ಈ ಪ್ರಕರಣವನ್ನು ಕರ್ನಾಟಕ ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಆಡಳಿತದ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಡೆಯ ಅಡಿಪಾಯ ದುರ್ಬಲವಾಗಿರುವುದೇ ದುರಂತಕ್ಕೆ ಪ್ರಮುಖ ಕಾರಣವಾಗಿದ್ದು, ಮಳೆಗಾಲದಲ್ಲಿ ಇಂತಹ ಅಪಾಯದ ಬಗ್ಗೆ ಅರಿವು ಇದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ಬೇಜವಾಬ್ದಾರಿ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ನಿರ್ಧರಿಸಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಬಿಎ ಮುಖ್ಯ ಆಯುಕ್ತ ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡುವ ಸಾಧ್ಯತೆ ಇದೆ.
ಇದರ ಜೊತೆಗೆ ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಪ್ರದೇಶಕ್ಕೂ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ.



